ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸಭೆ: ಶಾಸಕ ರೇಣುಕಾಚಾರ್ಯ ವಿರುದ್ಧ ಸಿಎಂ ಬಿಎಸ್‌ವೈ ಗರಂ

Update: 2020-04-26 14:54 GMT

ಬೆಂಗಳೂರು, ಎ. 26: ಕೊರೋನ ಸೋಂಕು ತಡೆಗೆ ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು ಬಹಳ ಮುಖ್ಯ. ಆದರೆ ಸಚಿವರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮ ಉಲ್ಲಂಘನೆ ಪ್ರಕರಣಗಳು ಅಲ್ಲಲ್ಲಿ ನಡೆಯುತ್ತಿವೆ. ನಿನ್ನೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳ್ಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಆಶಾ ಕಾರ್ಯಕರ್ತೆಯರ ಜತೆ ಸಭೆ ನಡೆಸಿದ್ದು, ಸಿಎಂ ಕೆಂಗಣ್ಣಿಗೆ ಗುರಿಯಾಗಿದೆ. ರೇಣುಕಾಚಾರ್ಯ ಅವರನ್ನು ಸಿಎಂ ತರಾಟೆಗೆ ತೆಗೆದುಕೊಂಡಿದ್ದಾರೆಂದು ಗೊತ್ತಾಗಿದೆ.

ಅಂತರ ಕಾಯ್ದುಕೊಳ್ಳದೆ ರೇಣುಕಾಚಾರ್ಯ ಸಭೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ರೇಣುಕಾಚಾರ್ಯಗೆ ದೂರವಾಣಿ ಕರೆ ಮಾಡಿ, 'ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕನಿಷ್ಠ ಜ್ಞಾನವೂ ಇಲ್ಲವೇ. ಜನಪ್ರತಿನಿಧಿಯಾಗಿ ನೀನೇ ಹೀಗೆ ಮಾಡಿದರೆ ಹೇಗೇ ? ರಾಜ್ಯ ಸರಕಾರ ಕೊರೋನ ವೈರಸ್ ಸೋಂಕು ತಡೆಗಟ್ಟಲು ಶ್ರಮಿಸುತ್ತಿದೆ, ನೀವೆಲ್ಲ ಏನು ಮಾಡುತ್ತಿದ್ದೀರಿ' ಎಂದು ತರಾಟೆಗೆ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ರಾಜ್ಯದ ಜನರಿಗೆ ಮಾದರಿಯಾಗಬೇಕಾದ ಶಾಸಕನಾಗಿ ನೀನೇ ಹೀಗೆ ನಡೆದುಕೊಂಡಿರುವುದು ಸರಿಯಲ್ಲ. ಸೋಂಕು ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ. ಯಾವುದೇ ಕಾರಣಕ್ಕೂ ಮುಂದೆ ಇಂತಹ ಘಟನೆ ಮರುಕಳಿಸಬಾರದು ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News