ವಿದೇಶದಲ್ಲಿ ಸಿಲುಕಿರುವ ಕನ್ನಡಿಗರು ಆತಂಕ ಪಡಬೇಕಿಲ್ಲ: ಸಿಎಂ ಯಡಿಯೂರಪ್ಪ ಅಭಯ
ಬೆಂಗಳೂರು, ಎ. 26: ವಿದೇಶಗಳಲ್ಲಿ ಸಿಲುಕಿಕೊಂಡ ಕನ್ನಡಿಗರನ್ನು ವಾಪಸ್ ಕರೆಸಿಕೊಳ್ಳುವ ಬಗ್ಗೆ ಅಂತರಾಷ್ಟ್ರೀಯ ವಿಮಾನ ಸಂಚಾರ ಪ್ರಾರಂಭವಾದ ನಂತರ ಕೇಂದ್ರ ಸರಕಾರದೊಂದಿಗೆ ಸಮನ್ವಯ ವಹಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.
ರವಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂಗ್ಲೆಂಡಿನಲ್ಲಿ ನೆಲೆಸಿರುವ ಕನ್ನಡಿಗರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು, ತಮ್ಮ ಹೆತ್ತವರು, ಪೋಷಕರ ಕುರಿತು ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ ಎಂದು ಅಭಯ ನೀಡಿದರು.
ಸರಕಾರದ ಸಹಾಯವಾಣಿಗೆ ಸಂಪರ್ಕಿಸಿದರೆ, ಕೂಡಲೇ ಅವರಿಗೆ ವೈದ್ಯಕೀಯ ಅಥವಾ ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದ ಅವರು, ಶೈಕ್ಷಣಿಕ ಸಾಲ ಪಡೆದು ವಿದೇಶಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಾಲ ಮರುಪಾವತಿ ಸಮಸ್ಯೆ ಕುರಿತು ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕೆ ಬಂದ ನಂತರ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದರು.
ಇಂಗ್ಲೆಂಡಿನ ಸಚಿವರ ಮೆಚ್ಚುಗೆ: ಭಾರತದಲ್ಲಿ ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ನಿಯಂತ್ರಣ ಮತ್ತು ಲಾಕ್‍ಡೌನ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಇಂಗ್ಲೆಂಡಿನ ಲಾರ್ಡ್ ಚಾನ್ಸಲರ್ ಮತ್ತು ಕಾನೂನು ಸಚಿವ ರಾಬರ್ಟ್ ಬಕ್ಲೆಂಡ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಬರ್ಟ್ ಬಕ್ಲೆಂಡ್ ಅವರು ಭಾರತದಲ್ಲಿ ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣವನ್ನು ಯಶಸ್ವಿಯಾಗಿ ನಿರ್ವಹಣೆ ಮಾಡುವ ಕುರಿತು ಮಾಹಿತಿ ಪಡೆದುಕೊಂಡರು. ಅವರ ಪ್ರಶ್ನೆಗಳಿಗೆ ಉತ್ತರಿಸಿದ ಯಡಿಯೂರಪ್ಪ, ಲಾಕ್‍ಡೌನ್ ಅನುಷ್ಠಾನ ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ. ಆಹಾರ ಮತ್ತಿತರ ಅಗತ್ಯ ವಸ್ತುಗಳ ಪೂರೈಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಯಾರೊಬ್ಬರು ಹಸಿವಿನಿಂದ ಇರಬಾರದು ಎಂದು ಸರಕಾರ ಕ್ರಮ ವಹಿಸಿದೆ ಎಂದರು.
ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಹಂತ ಹಂತವಾಗಿ ಮರು ಪ್ರಾರಂಭ ಮಾಡಲಾಗುವುದು ಎಂದ ಅವರು, ಗ್ರಾಮೀಣ ಪ್ರದೇಶದಲ್ಲಿ ಕೊರೋನ ವೈರಸ್ ಸೋಂಕು ಹರಡದೆ ಇರುವ ಬಗ್ಗೆ ರಾಬರ್ಟ್ ಬಕ್ಲೆಂಡ್ ಸಮಾಧಾನ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ತಿಳಿಸಲಾಗಿದೆ.