ಕೊಡಗು: ವಾರದಲ್ಲಿ 4 ದಿನ ಅಂಗಡಿಗಳನ್ನು ತೆರೆಯಲು ಅವಕಾಶ

Update: 2020-04-28 14:41 GMT

ಮಡಿಕೇರಿ, ಎ.28: ಕೊಡಗು ಜಿಲ್ಲೆ ಕೊರೋನ ಮುಕ್ತವಾಗಿ ಹಸಿರು ವಲಯಕ್ಕೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಬೆಳಗ್ಗೆ 6ರಿಂದ ಸಂಜೆ 4 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸಮ್ಮತಿ ಸೂಚಿಸಿದ್ದಾರೆ.

ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಸತಿ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಕೋವಿಡ್-19 ಬಗ್ಗೆ ಜಿಲ್ಲೆಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಜಿಲ್ಲೆಯಲ್ಲಿ ಕೊರೋನ ವೈರಸ್ ನಿಯಂತ್ರಿಸುವಲ್ಲಿ ಸಾರ್ವಜನಿಕ ಸಹಕಾರ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳು ಮತ್ತು ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸಬೇಕಾಗಿದೆ ಎಂದು ಎದ್ದು ನಿಂತ ಸಚಿವರು ತಾವು ಚಪ್ಪಾಳೆ ತಟ್ಟುವುದರೊಂದಿಗೆ ಸಭೆಯಲ್ಲಿದ್ದವರೂ ಚಪ್ಪಾಳೆ ತಟ್ಟುವ ಮೂಲಕ ಅಭಿನಂದನೆ ಸಲ್ಲಿಸಿದರು.

ಸಭೆಯಲ್ಲಿ ಮಾತನಾಡಿದ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು, ಕೊಡಗು ಜಿಲ್ಲೆ ಹಸಿರು ವಲಯಕ್ಕೆ ಬಂದಿರುವುದರಿಂದ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಬೇಕು. ಜೂನ್ ತಿಂಗಳಿನಿಂದ ಮುಂಗಾರು ಮಳೆ ಆರಂಭವಾಗುವುದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಅವಕಾಶ ಮಾಡಬೇಕು. ಮರಳು ತೆಗೆಯಲು ಅವಕಾಶ ಮಾಡಬೇಕು ಎಂದು ಕೋರಿದರು. 

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು, ಸರ್ಕಾರ ಸಹಕಾರ ಸಂಘಗಳಲ್ಲಿ ರೈತರ 1 ಲಕ್ಷ ರೂ. ವರೆಗಿನ ಸಾಲ ಮನ್ನಾ ಮಾಡಿದೆ. ಆದರೆ ಜಿಲ್ಲೆಯಲ್ಲಿ ಇನ್ನೂ ಒಂದು ಸಾವಿರ ರೈತರಿಗೆ ಅದನ್ನು ತಲುಪಿಸಬೇಕಿದೆ ಎಂದು ಮನವಿ ಮಾಡಿದರು. ಕುಂಬೂರಿನಲ್ಲಿ ನಿರಾಶ್ರಿತರಿಗೆ ನಿರ್ಮಾಣ ಮಾಡಿರುವ ಮನೆಗಳನ್ನು ತ್ವರಿತವಾಗಿ ಹಸ್ತಾಂತರ ಮಾಡಬೇಕು ಎಂದು ಅವರು ಗಮನ ಸೆಳೆದರು. ಶಾಸಕ  ಕೆ.ಜಿ.ಬೋಪಯ್ಯ ಅವರು, ಲಾಕ್‍ಡೌನ್ ಸಂಬಂಧ ಕೇಂದ್ರ ಸರ್ಕಾರದ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು. ಸದ್ಯದ ಪರಿಸ್ಥಿತಿಯಲ್ಲಿ ಮೀನು ಮತ್ತು ಹಂದಿ ಮಾಂಸವನ್ನು ಹೊರ ಜಿಲ್ಲೆ ಅಥವಾ ಹೊರ ರಾಜ್ಯದಿಂದ ತರಿಸುವುದು ಬೇಡ ಎಂದು ಸಲಹೆ ಮಾಡಿದರು.    

ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ವಿದ್ಯುತ್ ಬಿಲ್ ಪಾವತಿಸುವಂತೆ ಒತ್ತಾಯಿಸಬಾರದು  ಮತ್ತು ವಿದ್ಯುತ್ ಕಡಿತಗೊಳಿಸಬಾರದು ಎಂದು ಸಚಿವರ ಗಮನಸೆಳೆದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಸಭೆಯಲ್ಲಿ ಆರಂಭದಲ್ಲಿ ಇತ್ತೀಚೆಗೆ ನಿಧನರಾದ ವನ್ಯಜೀವಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಯ್ಯ ಅವರಿಗೆ ಮೌನಾಚರಣೆ ಮೂಲಕ ಸಂತಾಪ ಸೂಚಿಸಲಾಯಿತು. 

ಪ್ರವಾಸಿ ತಾಣ, ರೆಸಾರ್ಟ್, ಮದ್ಯಪಾನ ನಿರ್ಬಂಧ ಮುಂದುವರಿಕೆ
ಜಿಲ್ಲೆಯಲ್ಲಿ ಪ್ರವಾಸಿ ತಾಣ, ಸಂತೆ, ಸಮಾರಂಭ, ಹೊಟೇಲ್, ರೆಸಾರ್ಟ್‍ಗಳು, ಮದ್ಯಪಾನ, ತಂಬಾಕು, ಸಾರ್ವಜನಿಕ ಸಾರಿಗೆ ಮುಂತಾದವುಗಳಿಗೆ ನಿರ್ಬಂಧ ಮುಂದುವರಿಯಲಿದ್ದು, ಮದ್ಯದಂಗಡಿಗಳು ಮೇ 3ರವರೆಗೂ ಬಂದ್ ಆಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಸತಿ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆ ಕೊರೋನ ಮುಕ್ತವಾಗಿರುವುದರಿಂದ ವಾರದ ರವಿವಾರ, ಸೋಮವಾರ, ಬುಧವಾರ ಹಾಗೂ ಶುಕ್ರವಾರದಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗುವುದು ಎಂದರು. 

ಸಾರ್ವಜನಿಕರ ಹಿತದೃಷ್ಟಿಯಿಂದ ಲಾಕ್‍ಡೌನ್ ನಿಯಮಗಳಲ್ಲಿ ಸಡಿಲಿಕೆ ಮಾಡುವ ಮೂಲಕ ವಾರದ ನಾಲ್ಕು ದಿನ ಅಂಗಡಿ ಮುಂಗಟ್ಟುಗಳನ್ನು ತರೆಯಲು ಅವಕಾಶ ಕಲ್ಪಿಸಲಾಗುತ್ತದೆ. ತಾನು ಕೂಡಾ ವಿವಿಧೆಡೆ ಪ್ರವಾಸ ಮಾಡುತ್ತಿರುವುದರಿಂದ ವೈದ್ಯಕೀಯ ತಪಾಸಣೆ ಮಾಡಿಸಿಕೊಂಡ ಬಳಿಕ ನಿಟ್ಟುಸಿರು ಬಿಟ್ಟಿದ್ದೇನೆ. ನಾನು ನೋಡಿದ್ದರಲ್ಲಿ ಏನು ಬಂದರೂ ಎದುರಿಸಿ ನಿಂತು ಗೆಲ್ಲುವ ಸಾಮರ್ಥ್ಯ ಕೊಡಗು ಜಿಲ್ಲೆಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಜಿಲ್ಲೆಯಲ್ಲಿ ಶೇ.97ರಷ್ಟು ಪಡಿತರ ವಿತರಿಸಿ ಸಾಧಿಸಿರುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲೆಯ 13 ಚೆಕ್‍ಪೋಸ್ಟ್‍ಗಳನ್ನು ಉತ್ತಮವಾಗಿ ನೋಡಿಕೊಂಡಿರುವುದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. 

ಮಳೆಗಾಲ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ತುರ್ತಾಗಿ ಆಗಬೇಕಿರುವ ಕೆಲಸಗಳನ್ನು ಬೇಗನೇ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News