ರಾಜ್ಯದ ಹಲವೆಡೆ ಭಾರೀ ವರ್ಷಧಾರೆ: ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ
ಬೆಂಗಳೂರು, ಎ.29: ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಸಿಂಚನವಾಗಿದ್ದು, ಕೆಲವು ಕಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಇನ್ನೂ ಮೂರು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಾಧಾರಣಾ ಮಳೆ ಮುಂದುವರಿಯಲಿದೆ. ಮಂಗಳವಾರ ರಾತ್ರಿ ಹಾಗೂ ಬುಧವಾರ ಮುಂಜಾನೆ ಭಾರಿ ಮಳೆಯಾಗಿದೆ.
ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂಜಾನೆಯಿಂದಲೂ ಎಡೆಬಿಡದೆ ಧಾರಾಕಾರ ಮಳೆ ಸುರಿದಿದೆ. ಮಳೆ ಬಿದ್ದಿದ್ದರಿಂದ ರೈತ ಸಮುದಾಯದಲ್ಲಿ ಸಂತಸ ಮೂಡಿದೆ. ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರೆದಂತಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಭಾರಿ ಮಳೆಯಾದ ವರದಿಯಾಗಿದೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜಿಲ್ಲಾವಾರು ಗರಿಷ್ಠ ಪ್ರಮಾಣದ ಮಳೆ ಬಿದ್ದ ವಿವರ (ಮಿ.ಮೀ): ಬೆಂಗಳೂರು ನಗರ-110, ತುಮಕೂರು, ಬೆಂಗಳೂರು ಗ್ರಾಮಾಂತರ-107, ರಾಮನಗರ-66, ಚಿಕ್ಕಬಳ್ಳಾಪುರ -82, ಮೈಸೂರು-120, ಚಾಮರಾಜನಗರ-102, ಕೊಡಗು-46, ಚಿಕ್ಕಮಗಳೂರು-58, ಮಂಡ್ಯ-94 ಮಿ.ಮೀನಷ್ಟು ಮಳೆಯಾಗಿದ್ದು, ಉಳಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾದ ವರದಿಯಾಗಿದೆ.