ಕೈಗಾರಿಕೆ ಪುನರಾರಂಭಕ್ಕೆ ಸಿದ್ಧತೆ: ವಾಣಿಜ್ಯೋದಮಿಗಳೊಂದಿಗೆ ಮುಖ್ಯಮಂತ್ರಿ ಸಭೆ

Update: 2020-04-30 16:26 GMT

ಬೆಂಗಳೂರು, ಎ.30: ಕೋವಿಡ್-19 ಲಾಕ್‍ಡೌನ್ ಹಿನ್ನೆಲೆ ಮೇ 4ರ ನಂತರ ಪ್ರಧಾನಮಂತ್ರಿಯಿಂದ ಕೈಗಾರಿಕೆಗಳ ಪುನರಾರಂಭಕ್ಕೆ ಕುರಿತ ಮಾರ್ಗಸೂಚಿಗಳನ್ನು ನಿರೀಕ್ಷಿಸಲಾಗುತ್ತಿದ್ದು, ಅದರಂತೆ ಕೈಗಾರಿಕೆಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸಿಕೊಳ್ಳುವಂತೆ ಕೈಗಾರಿಕೋದ್ಯಮಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸುವ ನಿಟ್ಟಿನಲ್ಲಿ ವಿವಿಧ ವಾಣಿಜ್ಯೋದಮ ಸಂಘಟನೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಅವರು ಚರ್ಚಿಸಿದರು.

ವಾಣಿಜ್ಯೋದಮ ಸಂಘಟನೆಗಳ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ, ಕಳೆದ ಒಂದು ತಿಂಗಳ ಅವಧಿಯಲ್ಲಿ ಕೈಗಾರಿಕೋದ್ಯಮಿಗಳು ಸಂಕಷ್ಟಕ್ಕೆ ಒಳಗಾಗಿರುವುದು ಸರಕಾರಕ್ಕೆ ಅರಿವಿದೆ. ಆದರೆ, ಕಾರ್ಖಾನೆಗಳ ಮಾಲಕರು, ಕಾರ್ಮಿಕರ ವೇತನವನ್ನು ತಪ್ಪದೆ ಪಾವತಿಸುವಂತೆ ಮನವಿ ಮಾಡಿದರು.

ಅಲ್ಲದೆ, ಕಾರ್ಖಾನೆಗಳಲ್ಲಿ ಕಾರ್ಮಿಕರು, ಸಿಬ್ಬಂದಿಯ ಸುರಕ್ಷತೆಗೆ ಆದ್ಯತೆ ನೀಡಬೇಕು ಹಾಗೂ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಮತ್ತಿತರ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಅವರು ಸೂಚಿಸಿದರು.

ರಾಜ್ಯದಲ್ಲಿ ಈಗಾಗಲೆ ಹಸಿರು ವಲಯಗಳಲ್ಲಿ ಕೈಗಾರಿಕೆ ಪ್ರಾರಂಭಕ್ಕೆ ಅನುಮತಿ ನೀಡಲಾಗಿದೆ. ಮೇ 4ರ ನಂತರ ಕೇಂದ್ರ ಸರಕಾರದಿಂದ ಬರುವ ಮಾರ್ಗಸೂಚಿಗಳನ್ನು ನಿರೀಕ್ಷಿಸಲಾಗುತ್ತಿದೆ. ಅವುಗಳ ಅನ್ವಯ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕಾರ್ಮಿಕ ಸಚಿವ ಅರಬೈಲ್ ಶಿವರಾಮ್ ಹೆಬ್ಬಾರ್, ಎಫ್‍ಕೆಸಿಸಿಐ, ಸಣ್ಣ ಕೈಗಾರಿಕೆಗಳ ಸಂಘ, ಫಿಕ್ಕಿ, ಸಿಐಐ, ಅವೇಕ್, ಅಸೋಚಾಂ, ಬಿಸಿಐಸಿ, ಮಹಿಳಾ ಉದ್ಯಮಿಗಳ ಒಕ್ಕೂಟ ಮತ್ತಿತರ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News