ಲಾಕ್ ಡೌನ್ ಪರಿಷ್ಕೃತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಚಿವ ಜಾರಕಿಹೊಳಿ ಸೂಚನೆ

Update: 2020-05-04 06:36 GMT

ಬೆಂಗಳೂರು, ಮೇ 4: ಕೊರೋನ ಸೋಂಕು ನಿರ್ಮೂಲನೆಗಾಗಿ ರಾಜ್ಯ ಸರಕಾರ ಪ್ರಕಟಿಸಿರುವ ಪರಿಷ್ಕೃತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ‌.

ಸೋಮವಾರ ಗೋಕಾಕ್ ಪಟ್ಟಣದಲ್ಲಿನ ಸಚಿವರ ಗೃಹ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ‌ಮಾತನಾಡಿದ ಅವರು,   ಲಾಕ್ ಡೌನ್ ಸಂದರ್ಭದಲ್ಲಿ ಸರಕಾರಿ ಅಧಿಕಾರಿಗಳು ಸದಾ ಜನಪ್ರತಿನಿಧಿಗಳ ಜೊತೆ ಸಂಪರ್ಕದಲ್ಲಿ ಇರಬೇಕು. ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ಮಾಡಬೇಕು. ಕೋವಿಡ್-19 ಕುರಿತು ಜನರಿಗೆ ತಿಳುವಳಿಕೆ ಮೂಡಿಸಬೇಕು ಎಂದು‌ ಅಧಿಕಾರಿಗಳಿಗೆ ಸೂಚಿಸಿದರು.

ಆರೋಗ್ಯ ಕಾರ್ಯಕರ್ತರಿಗೆ ರಕ್ಷಣೆ ಒದಗಿಸಬೇಕು. ಮದ್ಯದ ಅಂಗಡಿಗಳಲ್ಲಿ ವ್ಯಕ್ತಿಗತ ಸಾಮಾಜಿಕ ಅಂತರ ಪಾಲಿಸದಿದ್ದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ವ್ಯಾಪಾರ ವಹಿವಾಟಿಗೆ ವಿನಾಯಿತಿ ನೀಡಲಾಗಿದ್ದರೂ ಜನರು ಮಾಸ್ಕ್ ಧರಿಸಿಯೇ ಮನೆಯಿಂದ ಹೊರಗೆ ಬರಬೇಕು. ಸ್ಯಾನಿಟೈಸರ್ ಬಳಕೆಯ ಅಗತ್ಯತೆಯನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು. ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುವವರನ್ನು ನಿರ್ದಾಕ್ಷಿಣ್ಯವಾಗಿ ದಂಡಿಸಬೇಕೆಂದು ಸಚಿವ ಜಾರಕಿಹೊಳಿ‌ ತಿಳಿಸಿದರು.

ವೈದ್ಯಕೀಯ ಸಿಬ್ಬಂದಿಯೂ ಸೇರಿದಂತೆ ಈ ಕೊರೋನ ಸೋಂಕು ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಕೋವಿಡ್ ಯೋಧರನ್ನು ಗೌರವಿಸಬೇಕು. ಸವಾಲಿನ ಈ‌ ಸಂದಿಗ್ಧ ಪರಿಸ್ಥಿತಿಯಲ್ಲಿ ಜನ ಒಗ್ಗಟ್ಟಾಗಿ, ಮನೆಯಲ್ಲಿಯೇ ಇರುವಂತೆ ಅರಿವು ಮೂಡಿಸಬೇಕು. ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರು ಇರುವ ಹಿನ್ನೆಲೆಯಲ್ಲಿ ಗೋಕಾಕ್ ಜನ ಹೆಚ್ಚು ಎಚ್ಚರಿಕೆಯಿಂದ ಇರಬೇಕೆಂದು ಸಚಿವರು ಕರೆ ನೀಡಿದರು.

ಅಧಿಕಾರಿಗಳ ಸಭೆಯಲ್ಲಿ ಗೋಕಾಕ್ ನ ತಹಶೀಲ್ದಾರ್, ಪೌರಾಯುಕ್ತ, ಡಿವೈಎಸ್ಪಿ ಸೇರಿದಂತೆ ತಾಲೂಕಿನ ಎಲ್ಲ ಸರಕಾರಿ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News