ಮೇ 12ರಂದು ಯುಎಇಯಿಂದ ಮಂಗಳೂರಿಗೆ ವಿಮಾನ: ಕೇಂದ್ರ ಸಚಿವ ಸದಾನಂದಗೌಡ

Update: 2020-05-07 14:54 GMT

ಹೊಸದಿಲ್ಲಿ, ಮೇ 7: ಅರಬ್ ದೇಶಗಳಲ್ಲಿರುವ ಕನ್ನಡಿಗರು ಸ್ವದೇಶಕ್ಕೆ ಮರಳಲು ಎರಡು ವಿಮಾನಗಳ ವ್ಯವಸ್ಥೆಯಾಗಿದೆ. ಮೇ 12ರಂದು ಯುಎಇಯಿಂದ ಮಂಗಳೂರಿಗೆ ವಿಮಾನ ಸಂಚರಿಸುವುದನ್ನು ವಿದೇಶಾಂಗ ವ್ಯವಹಾರಗಳ ಸಚಿವರು ತಮಗೆ ಖಚಿತಪಡಿಸಿದ್ದಾರೆ. ಇನ್ನೊಂದು ವಿಮಾನ ಬೆಂಗಳೂರಿಗೆ ಬರಲಿದ್ದು, ಅದರ ವೇಳಾಪಟ್ಟಿ ಇನ್ನು ಪ್ರಕಟವಾಗಬೇಕಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಲಾಕ್‍ಡೌನ್‍ನಿಂದಾಗಿ ಉತ್ತರ ಭಾರತದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ತಮ್ಮ ರಾಜ್ಯಕ್ಕೆ ಮರಳುವುದಕ್ಕಾಗಿ ವಿಶೇಷ ರೈಲೊಂದನ್ನು ಓಡಿಸಲು ರೈಲ್ವೆ ಇಲಾಖೆಯು ಒಪ್ಪಿಗೆ ನೀಡಿದೆ. ಈ ಸಂಬಂಧ ರೈಲ್ವೆ ಸಚಿವ ಪಿಯೂಶ್ ಗೋಯಲ್ ಜೊತೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಒಂದೆರಡು ದಿನಗಳಲ್ಲಿ ದಿಲ್ಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚರಿಸಲಿದೆ ಎಂದು ಅವರು ಹೇಳಿದ್ದಾರೆ.

ದಿಲ್ಲಿ ಹೊರತಾಗಿ ಹರಿಯಾಣ, ಪಂಜಾಬ್ ಮತ್ತಿತರ ಸಮೀಪದ ಸ್ಥಳಗಳಿಂದಲೂ ರಾಜ್ಯಕ್ಕೆ ವಾಪಸ್ ಆಗಲು ಅಲ್ಲಿರುವ ಕನ್ನಡಿಗರು ಕಾತರರಾಗಿದ್ದಾರೆ. ಆ ರಾಜ್ಯಗಳ ಅಧಿಕಾರಿಗಳ ಜೊತೆ ಮಾತನಾಡಿ ಅಲ್ಲಿರುವ ಕನ್ನಡಿಗರನ್ನು ಕೂಡಲೆ ದಿಲ್ಲಿಗೆ ಕರೆಸಿಕೊಂಡು ಇದೇ ರೈಲಿನಲ್ಲಿ ಕರ್ನಾಟಕಕ್ಕೆ ಕಳುಹಿಸಿಕೊಡಲು ಅಗತ್ಯ ವ್ಯವಸ್ಥೆ ಮಾಡುವಂತೆ ದಿಲ್ಲಿಯಲ್ಲಿರುವ ರಾಜ್ಯದ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸದಾನಂದಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News