ಕಾರ್ಮಿಕರಿಗೆ ಹಣ ಪಾವತಿಸಿರುವ ಬಗ್ಗೆ ವಿವರಣೆ ನೀಡಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು, ಮೇ 14: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಾಯ್ದೆ-1996ರ ಅನುಸಾರ ಕಾರ್ಮಿಕರಿಗೆ ಪಾವತಿಸಿರುವ ಹಣದ ವಿವರಣೆಗಳನ್ನು ನೀಡಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.
ಈ ಕುರಿತು ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠವು ಕೋವಿಡ್-19 ಹಿನ್ನೆಲೆಯಲ್ಲಿ ಕಾರ್ಮಿಕರು ಉದ್ಯೋಗವಿಲ್ಲದೇ ಆರ್ಥಿಕ ಶಕ್ತಿಯನ್ನು ಕಳೆದುಕೊಂಡಿದ್ದಾರೆ. ಹೀಗಾಗಿ, ಈ ಕಾರ್ಮಿಕರಿಗೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಾಯ್ದೆ ಅಡಿಯಲ್ಲಿ ಮತ್ತಷ್ಟು ಸವಲತ್ತುಗಳನ್ನು ವಿಸ್ತರಿಸಲು ಸಾಧ್ಯವೇ ಎಂಬುದನ್ನು ತಿಳಿಸಲು ಸರಕಾರಕ್ಕೆ ನಿರ್ದೇಶನ ನೀಡಿದೆ.
ಅರ್ಜಿದಾರರ ಪರ ವಾದಿಸಿದ ವಕೀಲರು, ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಾಯ್ದೆ ಅನುಸಾರ ಸೆಕ್ಷನ್ 11 ಮತ್ತು ಸುಪ್ರೀಂಕೋರ್ಟ್ ಹೊರಡಿಸಿರುವ ನಿರ್ದೇಶಗಳನ್ನು ಪೀಠಕ್ಕೆ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ರಾಜ್ಯ ಸರಕಾರ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಾಯ್ದೆ ಅಡಿಯಲ್ಲಿ ಕಾರ್ಮಿಕರಿಗೆ ಹಣ ಪಾವತಿಸಿದ್ದರೆ ಆ ವಿವರವನ್ನು ಸರಕಾರ ಪೀಠಕ್ಕೆ ಸಲ್ಲಿಸಬೇಕೆಂದು ತಿಳಿಸಿದರು. ಅಲ್ಲದೆ, ಪ್ರಕೃತಿ ವಿಕೋಪ ನಿರ್ವಹಣೆಗೆ ಅಸಂಘಟಿತ ಕಾರ್ಮಿಕರ ಪರಿಹಾರ ನಿಧಿ ಸ್ಥಾಪಿಸಲು ಸೂಚನೆ ನೀಡಿತು.
ಹೆಚ್ಚುವರಿ ಅಡ್ವಕೇಟ್ ಜನರಲ್ ಅವರು ವಾದಿಸಿ, ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಾಯ್ದೆ ಅಡಿಯಲ್ಲಿ ಈಗಾಗಲೇ ಕಾರ್ಮಿಕರಿಗೆ ತಲಾ 5 ಸಾವಿರ ರೂ. ಪಾವತಿಸಲಾಗಿದೆ. ಅಲ್ಲದೆ, ಈ ಬಗ್ಗೆ ಮಾಹಿತಿ ನೀಡುವುದಾತಿ ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಮುಂದೂಡಿತು.