ಸರಕಾರ ಆತುರದ ನಿರ್ಧಾರ ತೆಗೆದುಕೊಂಡಿದೆ: ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆಗೆ ಎಫ್‍ಕೆಸಿಸಿಐ ಅಸಮಾಧಾನ

Update: 2020-05-15 11:19 GMT

ಬೆಂಗಳೂರು, ಮೇ 15: ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದಕ್ಕೆ ಎಫ್‍ಕೆಸಿಸಿಐ ಅಧ್ಯಕ್ಷ ಸಿ.ಆರ್ ಜನಾರ್ದನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಹಿತದೃಷ್ಟಿಯನ್ನು ಕಾಪಾಡುವ ಹೆಸರಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲಾಗಿದೆ. ಕೊರೋನ ಲಾಕ್‍ಡೌನ್ ಸಂದರ್ಭದಲ್ಲಿ ಸರಕಾರ ಈ ಬಗ್ಗೆ ಪರಾಮರ್ಶಿಸದೆ ಆತುರದ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಸರಕಾರ ಈ ರೀತಿಯ ನಿರ್ಧಾರ ತೆಗೆದುಕೊಳ್ಳುವ ಸಂದರ್ಭದಲ್ಲಿ ಅದರ ಆಗುಹೋಗುಗಳನ್ನು ಅರಿತು ಸುಗ್ರೀವಾಜ್ಞೆ ಹೊರಡಿಸುವುದನ್ನು ಸ್ಥಗಿತಗೊಳಿಸಿದೆ. ಎಪಿಎಂಸಿ ವಲಯದ ಸಂಘ ಸಂಸ್ಥೆಗಳೊಡನೆ ಚರ್ಚಿಸದೆ ಸರಕಾರವು ಏಕಾಏಕಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವುದು ಸರಿಯಲ್ಲ. ಆದರೆ ಲಾಕ್‍ಡೌನ್ ಸಂದರ್ಭದಲ್ಲಿ ಎಫ್‍ಕೆಸಿಸಿಐ ಕಾಯ್ದೆ ಅಡ್ಡಿಪಡಿಸುವುದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಾಧಕ-ಬಾಧಕಗಳ ಬಗ್ಗೆ ಗಮನ ಸೆಳೆಯುತ್ತೇವೆ. ನಂತರ ಸರಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಆಧರಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು

ರಾಜ್ಯದಲ್ಲಿ 177 ಎಪಿಎಂಸಿ ಮಾರುಕಟ್ಟೆಗಳಿದ್ದು, ಸುಮಾರು 20 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಎಪಿಎಂಸಿ ಮಾರುಕಟ್ಟೆಯನ್ನು ಅವಲಂಬಿಸಿದೆ. ಬಹುರಾಷ್ಟ್ರೀಯ ಕಂಪೆನಿಗಳು ವಿದೇಶಗಳಲ್ಲಿ ಕಡಿಮೆ ಬೆಲೆಗೆ ಸಿಗುವ ಕಳಪೆ ಗುಣಮಟ್ಟದ ಆಹಾರ ಧಾನ್ಯಗಳನ್ನು ಭಾರತಕ್ಕೆ ತಂದು ಮಾರಾಟ ಮಾಡಿ ಲಾಭ ಗಳಿಸಲು ಅನುಕೂಲ ಮಾಡಿಕೊಟ್ಟಿದೆ. ಇದರಿಂದ ಮುಂದಿನ ದಿನಗಳಲ್ಲಿ ದೇಶಿಯ ರೈತರಿಗೆ ಭಾರಿ ಹಾನಿಯಾಗಿದೆ. ಸ್ಥಳೀಯ ವರ್ತಕರಿಗೂ ತೊಂದರೆಯಾಗಲಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News