ಸರಕಾರಿ ವಸತಿ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿ: ಡಿಸಿಎಂ ಕಾರಜೋಳ ಚಾಲನೆ

Update: 2020-05-15 18:04 GMT

ಬೆಂಗಳೂರು, ಮೇ 15: ಕೋವಿಡ್-19ರ ಹಿನ್ನೆಲೆಯಲ್ಲಿ ಮುಂದೂಡಿದ್ದ ಎಸೆಸೆಲ್ಸಿ ಪರೀಕ್ಷೆ ಬರೆಯಲಿರುವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ವಸತಿ ಶಾಲೆಗಳ 20,928 ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ನೂತನವಾಗಿ ಪ್ರಾರಂಭಿಸಿರುವ ಆನ್‍ಲೈನ್ ತರಗತಿಗೆ ಶುಕ್ರವಾರ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಚಾಲನೆ ನೀಡಿದರು.

ಕರ್ನಾಟಕ ಸ್ಟೇಟ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ ಮೂಲಕ ಆನ್‍ಲೈನ್ ತರಗತಿಗಳನ್ನು ನೇರವಾಗಿ ಪ್ರಸಾರ ಮಾಡಲಾಗುವುದು. ವಿದ್ಯಾರ್ಥಿಗಳು ತಮ್ಮ ಮೊಬೈಲ್, ಟ್ಯಾಬ್, ಕಂಪ್ಯೂಟರ್ ಗಳಲ್ಲಿ ವೀಕ್ಷಿಸಿ, ಸಮಸ್ಯೆ ಇದ್ದರೆ ಶಿಕ್ಷಕರೊಂದಿಗೆ ನೇರವಾಗಿ ಪ್ರಶ್ನೆಗಳನ್ನು ಕೇಳಿ ಪರಿಹರಿಸಿಕೊಳ್ಳಬಹುದು ಎಂದು ಅವರು ಹೇಳಿದರು.

ಎಲ್ಲ ವಿದ್ಯಾರ್ಥಿಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಫಲಿತಾಂಶ ಪಡೆಯಬೇಕು. ವಿದ್ಯಾರ್ಥಿಗಳು ಈ ವರ್ಷ ಉತಮ ರೀತಿಯ ಪೂರ್ವ ಸಿದ್ಧತೆ ಕೈಗೊಳ್ಳಬೇಕು. ಕಳೆದ ವರ್ಷ ಶೇ.95ರಷ್ಟಿದ್ದ ಫಲಿತಾಂಶ ಈ ವರ್ಷ ಶೇ.100ರಷ್ಟು ದೊರಕುವಂತೆ ಶ್ರಮವಹಿಸಬೇಕು ಎಂದು ಅವರು ತಿಳಿಸಿದರು.

ಕಳೆದ ಎರಡು ತಿಂಗಳಿನಿಂದ ಮನೆಯಲ್ಲಿ ಮಕ್ಕಳು ಅಭ್ಯಾಸ ಮಾಡುತ್ತಿರುವುದರಿಂದ ಹೆಚ್ಚು ಕಾಳಜಿ ವಹಿಸಬೇಕು. ಉತ್ತಮ ಮಾರ್ಗದರ್ಶನದೊಂದಿಗೆ ತಯಾರಿಸಿ ನಡೆಸಿ, ಉತ್ತಮ ಸಾಧನೆ ಮಾಡುವ ಮೂಲಕ ಸಮಾಜ ಕಲ್ಯಾಣ ಇಲಾಖೆ, ಸರಕಾರಕ್ಕೆ ಹಾಗೂ ತಂದೆ-ತಾಯಿಯವರಿಗೆ ಕೀರ್ತಿ ತರುವಂತೆ ಶ್ರಮ ವಹಿಸಬೇಕೆಂದು ಅವರು ಸಲಹೆ ನೀಡಿದರು.

ಕೋವಿಡ್-19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳಿಗೆ ತೆರಳಿ 10ನೇ ತರಗತಿ ಪರೀಕ್ಷೆಗೆ ಸಿದ್ಧತೆಯಲ್ಲಿ ತೊಡಗಿದ್ದಾರೆ. ಮನೆಯಲ್ಲಿ ಸ್ವಂತ ಅಧ್ಯಯನ ನಿರತರಾಗಿರುವ ವಿದ್ಯಾರ್ಥಿಗಳಿಗೆ ಅಗತ್ಯ ಸಲಹೆ, ಸೂಚನೆ ನೀಡಲು ಪ್ರತಿ 8 ವಿದ್ಯಾರ್ಥಿಗಳ ವಾಟ್ಸ್ ಅಪ್ ಗ್ರೂಪ್ ರಚನೆ ಮಾಡಿ, ಪ್ರತಿದಿನ ವಿದ್ಯಾರ್ಥಿಗಳಿಗೆ ಅಗತ್ಯವಾದ ಅಧ್ಯಯನ ಸಾಮಗ್ರಿಗಳು ಹಾಗೂ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಕಳುಹಿಸಿ ಮೌಲ್ಯಮಾಪನ ಮಾಡಿ, ಫಲಿತಾಂಶ ನೀಡಲಾಗುತ್ತಿದೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

ಈ ಶಿಕ್ಷಣ ಸಂಸ್ಥೆಗಳ ಸಂಘದಿಂದ ಪ್ರತ್ಯೇಕವಾದ ಯೂ-ಟ್ಯೂಬ್ ಚಾನಲ್, ಇ-ವಸಂತಿ ಶಾಲೆ ಎನ್ನುವ ಆಪ್ ಹಾಗೂ ಭವಿಷ್ಯದ ಆನ್‍ಲೈನ್ ಕ್ಲಾಸ್ ನಡೆಸಲು ಆನ್‍ಲೈನ್ ಮಾಸ್ಟರ್, ಸ್ಟುಡಿಯೊ ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನದ ಆಧಾರದ ಮೇಲೆ ಜಾಗತಿಕ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಾದ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News