ದ.ಕ. ಜಿಲ್ಲಾಡಳಿತದಲ್ಲಿ ಬಿಜೆಪಿ ಜನಪ್ರತಿನಿಧಿಗಳ ಹಸ್ತಕ್ಷೇಪ : ಎಸಿ ವಿನಯರಾಜ್ ಆರೋಪ
ಮಂಗಳೂರು, ಮೇ 18: ಕೊರೋನ-ಲಾಕ್‌ಡೌನ್ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತದಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಕಾರ್ಪೊರೇಟರ್, ದ.ಕ. ಜಿಲ್ಲಾ ಕಾಂಗ್ರೆಸ್ ವಕ್ತಾರ, ಕೆಪಿಸಿಸಿ ಮಾಧ್ಯಮ ಸಂಯೋಜಕ ಎ.ಸಿ. ವಿನಯರಾಜ್ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಸುಮಾರು 70 ಪ್ರಾಥಮಿಕ ಆರೋಗ್ಯ ಕೇಂದ್ರ, 8 ಸಮುದಾಯ ಆರೋಗ್ಯ ಕೇಂದ್ರ, 4 ತಾಲೂಕು ಆಸ್ಪತ್ರೆಗಳು ಮತ್ತು 1 ಜಿಲ್ಲಾ ಆಸ್ಪತ್ರೆ ಇದೆ. ಅನೇಕ ಖಾಸಗಿ ಆಸ್ಪತ್ರೆಗಳು ಕಾರ್ಯಾಚರಿಸುತ್ತಿವೆ. ಈ ಎಲ್ಲಾ ಖಾಸಗಿ ಆಸ್ಪತ್ರೆಗಳು ಚಾರಿಟೇಬಲ್ ಟ್ರಸ್ಟ್‌ನ ಅಡಿಯಲ್ಲಿವೆ. ಸರಕಾರಕ್ಕೆ ಕಟ್ಟುವ ತೆರಿಗೆಯಿಂದ ವಿನಾಯಿತಿ ಪಡೆದಿರುತ್ತವೆ. ಕೊರೋನ ವೈರಸ್ ನಿಂದ ಜಿಲ್ಲೆ ತತ್ತರಿಸಿದೆ. ಇದರಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಯು ಕೊರೋನ ಪರೀಕ್ಷೆಗೊಳಗಾಗುವುದು ಕಡ್ಡಾಯ ಎಂಬಂತಹ ವಾತಾವರಣ ಸೃಷ್ಟಿಯಾಗಿದೆ. ಇದರಿಂದ ಸಾವಿರಾರು ಮಂದಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ.
ಮಳೆಗಾಲದ ಸಂದರ್ಭ ಈ ಜಿಲ್ಲೆಯಲ್ಲಿ ಡೆಂಗ್, ಮಲೇರಿಯ, ಚಿಕುನ್ ಗುನ್ಯ, ಕೊರೋನ ಪ್ರಕರಣಗಳು ಹೆಚ್ಚಾಗುವ ಸಂಭವವಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್-19 ಪರೀಕ್ಷೆ ಮಾಡಿಸದೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದರೆ ಜಿಲ್ಲೆಯಲ್ಲಿ ಅನಾಹುತ ಸಂಭವಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಏನೇನು ಕ್ರಮ ಕೈಗೊಂಡಿದೆ ಎಂಬುದನ್ನು ಬಹಿರಂಗಪಡಿಸಬೇಕಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಬಿಜೆಪಿ ಶಾಸಕರು ಜಿಲ್ಲಾಡಳಿತದ ಮೇಲೆ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸದಿದ್ದರೆ ಜಿಲ್ಲಾಡಳಿತಕ್ಕೆ ಮುಕ್ತವಾಗಿ ಕೆಲಸ ಮಾಡಲು ಸಾಧ್ಯವಾಗದು ಎಂದು ವಿನಯರಾಜ್ ಅಭಿಪ್ರಾಯಪಟ್ಟಿದ್ದಾರೆ.