ಹೊಸ ಕಾಮಗಾರಿಗಳಿಗೆ ಆರ್ಥಿಕ ಇಲಾಖೆ ಅನುಮೋದನೆ ಕಡ್ಡಾಯ: ಗೋವಿಂದ ಕಾರಜೋಳ

Update: 2020-05-18 15:48 GMT

ವಿಜಯಪುರ, ಮೇ 18: ಪ್ರಸಕ್ತ ಸಾಲಿನಲ್ಲಿ ಯಾವುದೇ ಹೊಸ ಕಾಮಗಾರಿಗಳನ್ನು ಪ್ರಾರಂಭಿಸಲು ಆರ್ಥಿಕ ಇಲಾಖೆ ಅನುಮೋದನೆ ಕಡ್ಡಾಯ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಇಂದಿಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಹಿಂದಿನ ವರ್ಷದಲ್ಲಿ ಅನಾವೃಷ್ಟಿಯಿಂದ ಹಾನಿಗೊಳಗಾದ ರಸ್ತೆ, ಸೇತುವೆಗಳ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಎಲ್ಲ ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳುವುದರ ಜೊತೆಗೆ ಕೊರೋನ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಎಲ್ಲರೂ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕಾಮಗಾರಿ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುವ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂದು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ರಸ್ತೆ ನಿರ್ಮಾಣ, ಸಿಸಿ ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಈಗಾಗಲೇ ನೀಡುತ್ತಿರುವ ಆನ್‍ಲೈನ್ ತರಬೇತಿಯನ್ನು ಗುಣಮಟ್ಟದಿಂದ ಕೂಡಿರಬೇಕು. ಇಲಾಖೆ ವಿದ್ಯಾರ್ಥಿ ನಿಲಯಗಳ ಫಲಿತಾಂಶ ನೂರಕ್ಕೆ ಶೇ.100ರಷ್ಟು ಬರುವಂತೆ ಶ್ರಮವಹಿಸಬೇಕು ಎಂದು ಸಲಹೆ ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ನಿಗಮಗಳ ಫಲಾನುಭವಿಗಳ ವಿವರಗಳನ್ನು ಒದಗಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆ ದೊರಕುವಂತೆ ಕ್ರಮ ಕೈಗೊಳ್ಳಬೇಕು. ಯೋಜನೆಗಳ ಸದ್ಬಳಕೆ ಮಾಡಿಕೊಂಡು ಸಾಧಕರಾಗಿರುವವರ ಮಾಹಿತಿಯನ್ನೂ ಸಂಗ್ರಹಿಸಿ ಅವರಿಂದ ಇತರರಿಗೆ ಪ್ರೇರಿಪಿತವಾಗುವಂತೆ ಇಲಾಖೆ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.

ಕೊರೋನ ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿರುವ ರಸ್ತೆಬದಿ, ಹೊಟೇಲ್, ಬಸ್ ನಿಲ್ದಾಣಗಳ ಮುಂಭಾಗದಲ್ಲಿ ಪಾದರಕ್ಷೆ ಇತರೆ ಚರ್ಮ ವಸ್ತುಗಳ ದುರಸ್ತಿ ಹಾಗೂ ಪಾಲೀಶ್ ಮಾಡುವ ಕಾರ್ಯದಲ್ಲಿ ತೊಡಗಿರುವ ಚರ್ಮ ಕುಶಲಕರ್ಮಿಗಳಿಗೆ 5 ಸಾವಿರ ರೂ.ತಾತ್ಕಾಲಿಕ ಪರಿಹಾರ ವಿತರಣೆಗೆ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು 11,772 ಚರ್ಮ ಕುಶಲಕರ್ಮಿಗಳಿದ್ದು, ಅವರೆಲ್ಲರಿಗೂ ಸರಕಾರದಿಂದ ತಾತ್ಕಾಲಿಕ ಪರಿಹಾರ ವಿತರಣೆ ಮಾಡಲಾಗುತ್ತಿದೆ.

-ಗೋವಿಂದ ಕಾರಜೋಳ, ಉಪಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News