ಕೇಂದ್ರ, ರಾಜ್ಯ ಸರಕಾರದ ರೈತ, ಕಾರ್ಮಿಕ ವಿರೋಧಿ ನೀತಿ ವಿರುದ್ಧ ತೀವ್ರ ಹೋರಾಟ: ಸಿದ್ದರಾಮಯ್ಯ ಎಚ್ಚರಿಕೆ

Update: 2020-05-20 14:40 GMT

ಬೆಂಗಳೂರು, ಮೇ 20: ಕೇಂದ್ರ ಹಾಗೂ ಬಿಜೆಪಿ ಸರಕಾರಗಳು ರೈತ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದ್ದು, ಇದರ ವಿರುದ್ಧ ಕಾಂಗ್ರೆಸ್ ತೀವ್ರ ರೀತಿಯ ಹೋರಾಟಕ್ಕೆ ಇಳಿಯಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ವಿಧಾನಸೌಧದ ಪ್ರತಿಮೆಯ ಮುಂಭಾಗ ಎಪಿಎಂಸಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಹಾಗೂ ಗ್ರಾಮ ಪಂಚಾಯತ್‍ಗಳಿಗೆ ಅಡಳಿತ ಸಮಿತಿ ರಚಿಸುವ ಕ್ರಮವನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೋವಿಡ್-19ರ ಲಾಕ್‍ಡೌನ್‍ನಿಂದಾಗಿ ಕುಶಲಕರ್ಮಿಗಳು, ರೈತರು, ಕಾರ್ಮಿಕರು ದಿನನಿತ್ಯದ ಆಹಾರಕ್ಕೂ ಪರದಾಡುತ್ತಿದ್ದಾರೆ. ಇವರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವುದನ್ನು ಬಿಟ್ಟು, ರೈತ, ಕಾರ್ಮಿಕ ವಿರೋಧಿ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದೆ. ಬಿಜೆಪಿ ಸರಕಾರದ ಜನವಿರೋಧಿ ನೀತಿಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. 

ಎಪಿಎಂಸಿ ಕಾಯ್ದೆಗೆ ತರಾತುರಿಯಲ್ಲಿ ಸುಗ್ರಿವಾಜ್ಞೆ ಹೊರಡಿಸುವ ಅಗತ್ಯತೆ ಏನಿತ್ತು. ವಿರೋಧ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಎಲ್ಲವನ್ನು ಏಕಪಕ್ಷೀಯವಾಗಿ ಮಾಡಲು ಹೊರಟಿರುವುದು ಅಪ್ರಜಾಪ್ರಭುತ್ವವಾಗುತ್ತದೆ. ಹಾಗೆಯೇ ಗ್ರಾಮ ಪಂಚಾಯತ್‍ಗಳಿಗೆ ಚುನಾವಣಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿತ್ತು. ಆದರೆ, ಗ್ರಾಮ ಪಂಚಾಯತ್‍ಗಳಿಗೆ ಆಡಳಿತ ಸಮಿತಿ ರಚಿಸಲು ಮುಂದಾಗಿದೆ. ಈ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸಬೇಕು. ಈಗಿರುವ ಗ್ರಾಮ ಪಂಚಾಯತ್ ಸದಸ್ಯರನ್ನೇ ಮುಂದಿನ ಆರು ತಿಂಗಳವರೆಗೆ ಮುಂದುವರಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯ ಸರಕಾರ ಕೊರೋನ ಸೋಂಕನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ನಿನ್ನೆ(ಮೇ 19) ಒಂದೇ ದಿನ 149 ಮಂದಿಗೆ ಕೊರೋನ ಸೋಂಕು ತಗುಲಿದೆ. ಇಷ್ಟು ದಿನ ತಬ್ಲೀಗಿ ಸದಸ್ಯರಿಂದ ಕೊರೋನ ಹರಡುತ್ತಿದೆಯೆಂದು ಅಪ್ರಪ್ರಚಾರ ಮಾಡಲಾಗುತ್ತಿತ್ತು. ಈಗ ರಾಜ್ಯ ಸರಕಾರ ನಿನ್ನೆಯ ಪ್ರಕರಣಗಳ ವರದಿಗೆ ಏನು ಹೇಳುತ್ತದೆ. ಹೊರ ರಾಜ್ಯಗಳಿಂದ ಬಂದವರನ್ನು ಸರಿಯಾದ ರೀತಿಯಲ್ಲಿ ಕ್ವಾರಂಟೈನ್ ಮಾಡಬೇಕಿತ್ತು. ಅದನ್ನು ಮಾಡಲಿಲ್ಲ. ರಾಜ್ಯ ಹಾಗೂ ಕೇಂದ್ರ ಸರಕಾರಗಳು ಕೋವಿಡ್-19ನ್ನು ನಿರ್ವಹಿಸುವಲ್ಲಿ ವಿಫಲವಾಗಿವೆ ಎಂದು ಅವರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News