ಕೋವಿಡ್-19 ಹಿಮ್ಮೆಟ್ಟಿಸಲು ಸಾರ್ವಜನಿಕರ ಸಹಕಾರ ಅಗತ್ಯ: ಯಡಿಯೂರಪ್ಪ

Update: 2020-05-21 14:35 GMT

ಬೆಂಗಳೂರು, ಮೇ 21: ಕೋವಿಡ್-19ರ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾರ್ವಜನಿಕರ ಸಹಕಾರದಿಂದ ಕೊರೋನವನ್ನು ಹಿಮ್ಮೆಟ್ಟಿಸಬಹುದೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಗುರುವಾರ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪ್ರಶಾಂತನಗರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ 30 ಹಾಸಿಗೆ ಸಾಮರ್ಥ್ಯವುಳ್ಳ ಸುಸಜ್ಜಿತ ಹೆರಿಗೆ ಆಸ್ಪತ್ರೆಯ ಉದ್ಘಾಟನೆ ಹಾಗೂ ಎಂಸಿ ಬಡಾವಣೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ 200ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹೆರಿಗೆ ಆಸ್ಪತ್ರೆಯನ್ನು 7 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ. ನವನಗರೋತ್ಥಾನ ಯೋಜನೆಯಡಿಯಲ್ಲಿ 35 ಕೋಟಿ ರೂ.ವೆಚ್ಚದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ಒಪಿಡಿ ಬ್ಲಾಕ್, ಲ್ಯಾಬ್, ಫಾರ್ಮಸಿ, ತುರ್ತು ಚಿಕಿತ್ಸಾ ಘಟಕ, ಐಸಿಯು, ಓಟಿ, ಡಯಾಲಿಸಿಸ್ ಸೆಂಟರ್, ಎಕ್ಸ್ ರೇ ವಿಭಾಗ, ಕ್ಯಾಂಟೀನ್ ಹಾಗೂ ಜನರಲ್, ಸ್ಪೆಷಲ್ ವಾರ್ಡ್‍ಗಳು ಅಧುನಿಕ ಸೌಲಭ್ಯಗಳನ್ನೊಳಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇದಾಗಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಸುತ್ತಮುತ್ತಲಿನ ಜನತೆಗೆ ಈ ಆಸ್ಪತ್ರೆಯಿಂದ ಗುಣಮಟ್ಟದ ಚಿಕಿತ್ಸೆ ದೊರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕೊರೋನ ವಿರುದ್ದದ ಹೋರಾಟದಲ್ಲಿ ತೊಡಗಿಸಿಕೊಂಡಿರುವ ವೈದ್ಯರು, ನರ್ಸ್‍ಗಳು, ಅರೆ ವೈದ್ಯಕೀಯ ಸಿಬ್ಬಂದಿ ತಂತ್ರಜ್ಞರು ಹಾಗೂ ಅಶಾ ಕಾರ್ಯಕರ್ತರಿಗೆ ಅಪಾಯ ಸಂಭವಿಸಿದರೆ 50 ಲಕ್ಷ ರೂ.ಗಳ ವಿಮೆಯನ್ನು ಕೇಂದ್ರ ಸರಕಾರ ಘೋಷಿಸಿದೆ. ಆಶಾ ಕಾರ್ಯಕರ್ತೆಯರ ವಿಶೇಷ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರದ ವತಿಯಿಂದ ತಲಾ 3 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಎಲ್ಲಾ ವರ್ಗದ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವುದು ಸರಕಾರದ ಧ್ಯೇಯವಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಮೂಲಸೌಕರ್ಯ ಒದಗಿಸಲು ನಮ್ಮ ಸರಕಾರ ಆದ್ಯತೆ ನೀಡಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಸುಸಜ್ಜಿತ ಸೌಕರ್ಯಗಳು ಅತಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಇಂತಹ ಸುಸಜ್ಜಿತ ಕಟ್ಟಡಗಳ ನಿರ್ವಹಣೆ ಹಾಗೂ ಸ್ವಚ್ಛತೆ ಹಿಂದೆಂದಿಗಿಂತಲೂ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತದೆ. ಹೀಗಾಗಿ ಆರೋಗ್ಯ ರಕ್ಷಕರು ಹಾಗೂ ಸ್ವಚ್ಛತಾ ಕಾರ್ಯಕರ್ತರ ಸೇವೆಯನ್ನು ಗುರುತಿಸಿ ಗೌರವಿಸೋಣವೆಂದು ಅವರು ಹೇಳಿದರು.

ಸಮಾರಂಭದಲ್ಲಿ ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಆಹಾರ ಸಚಿವ ಕೆ.ಗೋಪಾಲಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News