ಉತ್ತರ ಪ್ರದೇಶ ನಿಮ್ಮ ಸರಕಾರದ ಆಸ್ತಿ ಅಲ್ಲ: ಆದಿತ್ಯನಾಥ್ ಗೆ ಡಿ.ಕೆ.ಶಿ ತಿರುಗೇಟು

Update: 2020-05-26 11:56 GMT

ಬೆಂಗಳೂರು, ಮೇ 26: ಉತ್ತರ ಪ್ರದೇಶದ ಕಾರ್ಮಿಕರು ಅನ್ಯ ರಾಜ್ಯಗಳಿಗೆ ಹೋಗಿ ಕೆಲಸ ಮಾಡುವಂತಿಲ್ಲ ಎಂದು ನಿರ್ದೇಶಿಸುವ ಮೂಲಕ ದೇಶದ ಒಕ್ಕೂಟ ವ್ಯವಸ್ಥೆಗೆ ಹಾಗೂ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತಂದಿರುವ ಅಲ್ಲಿನ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ತಕ್ಷಣವೇ ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಸಂವಿಧಾನದ ಪರಿಚ್ಚೇದ 19(1) `ಡಿ' ಮತ್ತು `ಈ' ಅನ್ವಯ ದೇಶದ ಪ್ರತಿಯೊಬ್ಬ ಪ್ರಜೆ ದೇಶದೊಳಗಿನ ಯಾವುದೇ ಜಾಗಕ್ಕೆ ತೆರಳಿ, ಅಲ್ಲೇ ನೆಲೆಸಿ, ಕೆಲಸ ಮಾಡುವ ಹಕ್ಕನ್ನು ಹೊಂದಿದ್ದಾನೆ. ಆದರೆ, ಹೊರ ರಾಜ್ಯಗಳಿಂದ ರಾಜ್ಯಕ್ಕೆ ವಾಪಸ್ಸಾಗುತ್ತಿರುವ ಕಾರ್ಮಿಕರನ್ನು ಸ್ವಾಗತಿಸಿ ಅವರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ಬದಲು ಆದಿತ್ಯನಾಥ್ ಅವರು  ಈ ರೀತಿಯ ಉದ್ಧಟತನದ ನಿರ್ಧಾರ ಮಾಡಿರುವುದು ಸರಿಯಲ್ಲ ಎಂದು ಶಿವಕುಮಾರ್ ಆಕ್ಷೇಪಿಸಿದ್ದಾರೆ.

ಭಾರತ ಒಕ್ಕೂಟ ವ್ಯವಸ್ಥೆಯಾಗಿದ್ದು, ಉತ್ತರ ಪ್ರದೇಶ ನಿಮ್ಮ ಸರಕಾರದ ಆಸ್ತಿ ಅಲ್ಲ. ಈ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನ ಒಂದಷ್ಟು ಹಕ್ಕುಗಳನ್ನು ನೀಡಿದ್ದು, ಅದನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಸರಕಾರಗಳು ಇಂತಹ ಸರ್ವಾಧಿಕಾರಿ ಧೋರಣೆ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರುತ್ತಿವೆ ಎಂದು ಅವರು ವಾಗ್ದಾಳಿ ನಡೆಸಿದರು.

ಆದಿತ್ಯನಾಥ್‍ ರಿಗೆ ದೇಶದ ಸಂವಿಧಾನದ ಬಗ್ಗೆ ಕಿಂಚಿತ್ತು ಅರಿವಿಲ್ಲ. ಒಂದು ವೇಳೆ ಅವರಿಗೆ ಅದರ ಪರಿಜ್ಞಾನವಿದ್ದರೆ ಈ ರೀತಿ ಜನದ್ರೋಹಿ ಮಾತುಗಳನ್ನು ಆಡುತ್ತಿರಲಿಲ್ಲ. ಯಾರೂ ಎಲ್ಲಿ ಬೇಕಾದರೂ ಹೋಗಿ ಕೆಲಸ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಹೋಗಲು ಯಾರಿಗೂ ಪಾಸ್‍ಪೋರ್ಟ್ ಅಗತ್ಯವಿಲ್ಲ. ಆದಿತ್ಯನಾಥ್ ರ ಈ ಸರ್ವಾಧಿಕಾರಿ ಧೋರಣೆ ಪ್ರಜಾಪ್ರಭುತ್ವ ವಿರೋಧಿ ಎಂದು ಶಿವಕುಮಾರ್ ಟೀಕಿಸಿದ್ದಾರೆ.

ಉತ್ತರ ಪ್ರದೇಶದ ಕಾರ್ಮಿಕರು ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರ, ತೆಲಂಗಾಣ ಸೇರಿ ದೇಶದ ಎಲ್ಲ ಕಡೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿಯಲ್ಲಿ ಕನ್ನಡಿಗರು ಎಲ್ಲ ಕಡೆಗಳಲ್ಲಿ ದುಡಿಯುತ್ತಿದ್ದಾರೆ. ಹೀಗೆ ಹೋಗುವವರನ್ನು ಆದಿತ್ಯನಾಥ್  ಅವರು ಕಟ್ಟಿ ಹಾಕಲು ಸಾಧ್ಯವಿಲ್ಲ. ಈ ರೀತಿಯಲ್ಲಿ ನಿರ್ಬಂಧ ಹೇರಲು ಸಂವಿಧಾನದಲ್ಲಿ ಅವಕಾಶವಿಲ್ಲ ಎಂದು ಶಿವಕುಮಾರ್ ಎಚ್ಚರಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ  ಆದಿತ್ಯನಾಥ್ ಅವರು ಒಕ್ಕೂಟ ವ್ಯವಸ್ಥಗೆ ವಿರುದ್ಧ ನಿರ್ಣಯ ಕೈಗೊಂಡಿದ್ದು, ಕೂಡಲೇ ಅವರನ್ನು ಸಿಎಂ ಸ್ಥಾನದಿಂದ ವಜಾ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಕ್ಷಿಸಬೇಕು. ಇಲ್ಲವಾದರೆ, ಕಾಂಗ್ರೆಸ್ ದೇಶ್ಯಾದ್ಯಂತ ಉಗ್ರ ಸ್ವರೂಪದ ಹೋರಾಟ ರೂಪಿಸಲಿದೆ.
-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News