ಜೂನ್ 7ಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ ಸಮಾರಂಭ

Update: 2020-05-26 13:42 GMT

ಬೆಂಗಳೂರು, ಮೇ 26: ಕೊರೋನ ಸೋಂಕು ತಡೆಗಟ್ಟಲು ಹೇರಿದ್ದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಧಿಕಾರ ಸ್ವೀಕಾರ ಸಮಾರಂಭವನ್ನು ಜೂನ್ 7ಕ್ಕೆ ನಡೆಸಲು ತೀರ್ಮಾನಿಸಲಾಗಿದೆ.

ಮಾರಕ ಸೋಂಕು ಭೀತಿ ಹಿನ್ನೆಲೆಯಲ್ಲಿ ವ್ಯಕ್ತಿಗತ ಅಂತರ ಕಾಯ್ದುಕೊಳ್ಳಬೇಕಿದ್ದು ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಸಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಬೆಂಗಳೂರು ನಗರದಲ್ಲಿ ಸೀಮಿತ ಮುಖಂಡರ ಸಮ್ಮುಖದಲ್ಲಿ ಸರಳ ಸಮಾರಂಭವನ್ನು ಏರ್ಪಡಿಸಲು ಸಿದ್ಧತೆ ನಡೆಸಲಾಗಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಾಮೂಹಿಕ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆಂದು ಗೊತ್ತಾಗಿದೆ.

ಈ ಸಂಬಂಧ ಎಲ್ಲ ಜಿಲ್ಲೆ, ಪ್ರತಿಯೊಂದು ಪಂಚಾಯತ್ ಕ್ಷೇತ್ರ, ವಾರ್ಡ್, ನಗರಸಭೆ, ಪುರಸಭೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರ ಸ್ವೀಕಾರ ಸಮಾರಂಭದ ವೀಕ್ಷಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಈ ಕಾರ್ಯಕ್ರಮಕ್ಕೆ ಪಕ್ಷದಿಂದ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಬೆಂಗಳೂರು ನಗರದಲ್ಲಿ ಸರಳ ಸಮಾರಂಭ ನಡೆಯಲಿದ್ದು, ಆಹ್ವಾನಿತರಿಗೆ ಮಾತ್ರ ಪ್ರವೇಶವಿರಲಿದೆ. ಇತರರು ಯಾರೂ ಕಾರ್ಯಕ್ರಮಕ್ಕೆ ಆಗಮಿಸುವಂತಿಲ್ಲ. ಎಲ್ಲ ಮುಖಂಡರು ಮತ್ತು ಕಾರ್ಯಕತರು ತಮ್ಮ ಊರುಗಳಲ್ಲೇ ಇದ್ದು ನೂತನ ಅಧ್ಯಕ್ಷರಿಗೆ ಶುಭ ಕೋರಬೇಕು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಎಲ್ಲರೂ ಮಾಸ್ಕ್ ಧರಿಸಿ, ಸುರಕ್ಷಿತ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳದಲ್ಲಿ ಸ್ಯಾನಿಟೈಸರ್ ಒದಗಿಸಬೇಕು. ಸರಕಾರದ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಪಕ್ಷದಿಂದ ನಿರ್ದೇಶನ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News