ಒಂದು ವಾರ ಕಾಲ ಕರಾವಳಿ ಹಾಗೂ ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

Update: 2020-05-26 14:25 GMT

ಬೆಂಗಳೂರು, ಮೇ 26: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ಅಂಫಾನ್ ಚಂಡಮಾರುತದ ಪರಿಣಾಮ ತಣ್ಣಗಾಗುತ್ತಿರುವಂತೆಯೇ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು ಒಂದು ವಾರ ಕಾಲ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ಕರಾವಳಿಯಲ್ಲಿ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದ್ದು ನಂತರ ಒಂದೆರಡು ದಿನ ಭಾರೀ ಮಳೆಯಾಗಲಿದೆ. ಹಾಗೆಯೇ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

ಮುಂಗಾರು ಆರಂಭಕ್ಕೆ ಮುಂಚಿತವಾಗಿಯೇ ರಾಜ್ಯದಲ್ಲಿ ಉತ್ತಮ ಮಳೆ ನಿರೀಕ್ಷೆ ಇದೆ. ಇದಕ್ಕೆ ಪೂರಕವಾಗಿ ವಾತಾವರಣವೂ ಇರುವುದರಿಂದ ಮಳೆಯಾಗುವ ಲಕ್ಷಣಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್. ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳೂ ಕಂಡುಬಂದಿದ್ದರೂ ಇದು ಮಾರ್ಪಾಡಾಗುವ ಸಾಧ್ಯತೆಯೂ ಇದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ವಾಯುಭಾರ ಕುಸಿತದ ಪ್ರಮಾಣವನ್ನು ತಗ್ಗಿಸುವ ಸಾಧ್ಯತೆ ಇದೆ. ಒಂದು ವೇಳೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದರೆ ಕಳೆದ ವರ್ಷದಂತೆ ಮುಂಗಾರು ವಿಳಂಬವಾಗುವ ಸಾಧ್ಯತೆಗಳಿವೆ. ಆದರೆ, ಈಗಿನ ವಾತಾವರಣವನ್ನು ಗಮನಿಸಿದರೆ ಅಂತಹ ಸಾಧ್ಯತೆಗಳು ಕಡಿಮೆ ಇದೆ.

ವಾಯುಭಾರ ಕುಸಿತದ ಪ್ರಮಾಣ ಕಡಿಮೆ ಆಗುವ ಸಾಧ್ಯತೆಗಳು ಹೆಚ್ಚಿರುವುದರಿಂದ ಮುಂಗಾರು ವಿಳಂಬವಾಗುವುದಿಲ್ಲ. ಈ ಬಗ್ಗೆ ಇನ್ನೆರಡು ದಿನದಲ್ಲಿ ಸ್ಪಷ್ಟತೆ ಸಿಗಲಿದೆ. ಸದ್ಯಕ್ಕೆ ರಾಜ್ಯದ ದಕ್ಷಿಣ ಒಳನಾಡಿನ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News