ಪಕ್ಷಾಂತರ ನಿಷೇಧ ಕಾಯಿದೆ: ಮೇ 28 ರಂದು ಸಂಸದೀಯ ಗಣ್ಯರ ಸಭೆ

Update: 2020-05-26 17:52 GMT

ಬೆಂಗಳೂರು, ಮೇ 26: ಪಕ್ಷಾಂತರ ನಿಷೇಧ ಕಾಯಿದೆಗೆ ಸಂಬಂಧಿಸಿದಂತೆ ಭಾರತ ಸಂವಿಧಾನದ ಹತ್ತನೆ ಅನುಸೂಚಿಯಲ್ಲಿ ಪೀಠಾಸೀನ ಅಧಿಕಾರಿಗಳಿಗೆ ಲಭ್ಯವಿರುವ ಅಧಿಕಾರಗಳು ಹಾಗೂ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳ ಮರು ಪರಿಶೀಲನೆ ಕುರಿತಂತೆ ಅಭಿಪ್ರಾಯ ಪಡೆಯಲು ಮೇ 28 ರಂದು ಬೆಳಗ್ಗೆ 10.30ಕ್ಕೆ ವಿಧಾನಸೌಧದ ಮೊದಲನೆಯ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ ಸಂಸದೀಯ ಗಣ್ಯರ ಸಭೆ ನಡೆಯಲಿದೆ.  

ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಸಭಾಧ್ಯಕ್ಷ ಆನಂದ ಚಂದ್ರಶೇಖರ ಮಾಮನಿ, ಸರಕಾರದ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಶಾಸಕರಾದ ಕೆ.ಜಿ.ಬೋಪಯ್ಯ, ಉಮೇಶ್ ಕತ್ತಿ ಹಾಗೂ ಅರವಿಂದ ಲಿಂಬಾವಳಿ ಬಿಜೆಪಿ ಪಕ್ಷದ ಪ್ರತಿನಿಧಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕರಾದ ಕೆ.ಆರ್.ರಮೇಶ್ ಕುಮಾರ್, ಆರ್.ವಿ.ದೇಶಪಾಂಡೆ, ಎಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಅಜಯ್ ಧರ್ಮಸಿಂಗ್ ಮತ್ತು ಡಾ.ಜಿ.ಪರಮೇಶ್ವರ್ ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳಾಗಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಶಾಸಕರಾದ ಎಚ್.ಡಿ.ಕುಮಾರಸ್ವಾಮಿ, ಎಂ.ಕೆ.ಶಿವಲಿಂಗೇಗೌಡ, ವೆಂಕಟರಾವ್ ನಾಡಗೌಡ ಮತ್ತು ಎ.ಟಿ.ರಾಮಸ್ವಾಮಿ ಜೆಡಿಎಸ್ ಪಕ್ಷದ ಪ್ರತಿನಿಧಿಗಳಾಗಿ ಭಾಗವಹಿಸಲಿದ್ದಾರೆ.

ಅಲ್ಲದೆ, ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಮತ್ತು ಕಾನೂನು ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಎಸ್.ವೈ.ವಟವಟಿ ಸಭೆಯಲ್ಲಿ ಹಾಜರಿರುತ್ತಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News