ಸರಕಾರ ಇಟ್ಟ ಹೆಜ್ಜೆ ಹಿಂದೆ ಇಡದು: ಸಚಿವ ಬಿ.ಸಿ.ಪಾಟೀಲ್

Update: 2020-05-27 12:16 GMT

ಕೊಪ್ಪಳ, ಮೇ 27: ನೀತಿ ನಿಯಮಗಳಡಿಯಲ್ಲಿಯೇ ಮೆಕ್ಕೆಜೋಳ ರೈತರಿಗೆ ಪರಿಹಾರ ಒದಗಿಸಲಾಗುವುದು. ಇದರಲ್ಲಿ ಯಾವುದೇ ಸಂಶಯ ಬೇಡ. ಅಲ್ಲದೆ, ರಾಜ್ಯ ಸರಕಾರ ಇಟ್ಟ ಹೆಜ್ಜೆ ಹಿಂದೆ ಇಡುವುದಿಲ್ಲ. ವಿಪಕ್ಷಗಳ ಅನಗತ್ಯ ಟೀಕೆಗೆ ಗಮನ ಕೊಡುವ ಅವಶ್ಯಕತೆಯೂ ಇಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ವಾರ ರಾಜ್ಯದಲ್ಲಿ ಮೆಕ್ಕೆಜೋಳ ಬೆಳೆದಂತಹ ರೈತರಿಗೆ ಬೆಂಬಲ ಬೆಲೆ ನೀಡುವಂತಹ ಐತಿಹಾಸಿಕ ತೀರ್ಪನ್ನು ಮುಖ್ಯಮಂತ್ರಿಗಳು ಘೋಷಿಸಿದ್ದರು. 10 ಲಕ್ಷ ರೈತರಿಗೆ ತಲಾ 5 ಸಾವಿರ ರೂ.ನಂತೆ ಒಟ್ಟು 500 ಕೋಟಿ ರೂ.ಗಳ ಹಣ ಪರಿಹಾರ ಘೋಷಣೆ ಮಾಡಿದ್ದು, ಈ ಸಂಬಂಧ ಮಾರ್ಗಸೂಚಿ ಹೊರಡಿಸಲಾಗಿದೆ ಎಂದರು.

ಸಮಿತಿ ರಚನೆ: ಸಹಾಯಕ ಕೃಷಿ ಅಧಿಕಾರಿ, ಕೃಷಿ ಅಧಿಕಾರಿ ಹಾಗೂ ಗ್ರಾಮ ಲೆಕ್ಕಿಗರನ್ನೊಳಗೊಂಡ ಹೋಬಳಿ ಮಟ್ಟದ ಸಮಿತಿ, ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನೊಳಗೊಂಡ ತಾಲೂಕು ಸಮಿತಿ. ಅದೇ ರೀತಿ, ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಹಾಗೂ ಉಪ ಕೃಷಿ ನಿರ್ದೇಶಕರನ್ನೊಳಗೊಂಡ ಸಮಿತಿ ಹಾಗೂ ಕೃಷಿ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಕೃಷಿ ನಿರ್ದೇಶಕರು, ಅಪರ ಕೃಷಿ ನಿರ್ದೇಶಕರು ಮತ್ತು ಜಂಟಿ ಕೃಷಿ ನಿರ್ದೇಶಕರನ್ನೊಳಗೊಂಡ ರಾಜ್ಯಮಟ್ಟದ ಸಮಿತಿ ರಚಿಸಲಾಗಿದೆ. ಸದ್ಯದಲ್ಲಿಯೇ ಮೆಕ್ಕೆಜೋಳ ರೈತರಿಗೆ ಪರಿಹಾರದ ಹಣ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News