ಸ್ವರ್ಣ ನದಿಯಿಂದ ಅಕ್ರಮ ಮರಳು ಸಾಗಾಟ ಪ್ರಕರಣ: ಬ್ಲಾಕ್ ಕಾಂಗ್ರೆಸ್‌ನಿಂದ ಸಾಕ್ಷಾಧಾರಗಳ ಪೆನ್‌ಡ್ರೈವ್ ಬಿಡುಗಡೆ

Update: 2020-05-27 14:26 GMT

ಉಡುಪಿ, ಮೇ 27: ಹಿರಿಯಡ್ಕ ಸಮೀಪದ ಸ್ವರ್ಣ ನದಿಯಿಂದ ಹೂಳು ತೆಗೆಯುವ ನೆಪದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಸಾಕ್ಷಗಳನ್ನು ಹೊಂದಿರುವ ಪೆನ್‌ಡ್ರೈವ್ ಅನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ಈ ಅಕ್ರಮ ಮರಳು ಸಾಗಾಟ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಈಗಾಗಲೇ ಎಸಿಬಿ ಹಾಗೂ ಲೋಕಾಯುಕ್ತಕ್ಕೆ ದೂರು ನೀಡ ಲಾಗಿದೆ. ಇದರಲ್ಲಿ ಶಾಮೀಲಾದ ಅಧಿಕಾರಿಗಳು, ಗುತ್ತಿಗೆದಾರರು, ಜನಪ್ರತಿ ನಿಧಿಗಳು ಹಾಗೂ ಪ್ರಭಾವಿ ರಾಜಕಾರಣಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಈಗಾಗಲೇ ಇಲ್ಲಿಂದ ಸಾವಿರಾರು ಲೋಡ್ ಮರಳನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ. ಇನ್ನು ಸಾವಿರಾರು ಟನ್ ಮರಳನ್ನು ಸ್ಥಳದಲ್ಲಿ ಶೇಖರಿಸಿ ಇಡಲಾಗಿದೆ. ಮೇ 26ರಂದು ಬೆಳಗಿನ ಜಾವ ಕೂಡ ಈ ಶೇಖರಿಸಿಟ್ಟ ಮರಳನ್ನು ಅಕ್ರಮವಾಗಿ ಸಾಗಾಟ ಮಾಡಿರುವುದು ಕಂಡು ಬಂದಿದೆ. ಆದುದರಿಂದ ಸಂಗ್ರಹಿಸಿ ಇಡಲಾದ ಈ ಮರಳನ್ನು ಕೂಡಲೇ ಮುಟ್ಟುಗೋಲು ಹಾಕಬೇಕು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ವಿಜಯ ಪೂಜಾರಿ, ಮುಖಂಡರಾದ ಜನಾರ್ದನ ಭಂಡಾರ್ಕರ್, ಪ್ರಶಾಂತ್ ಪೂಜಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News