ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ವರಿಷ್ಠರ ತೀರ್ಮಾನ ಅಂತಿಮ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಆಹಮದ್

Update: 2020-05-28 16:45 GMT

ಮೈಸೂರು, ಮೇ 29: ಮುಂಬರುವ ಮೇಲ್ಮನೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿಯ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನ ಅಂತಿಮ. ಅದಕ್ಕೆ ನಾವು ಬದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಕರೆದಿದ್ದ ಜನಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳ ಸಭೆಯ ಮುನ್ನ  ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಂದಿನ ದಿನಗಳಲ್ಲಿ ಬರಲಿರುವ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗೆ ಜೆಡಿಎಸ್ ಜೊತೆಗಿನ ಮೈತ್ರಿಯ ಬಗ್ಗೆ ಇನ್ನೂ ಯಾವುದೇ ಯೋಚನೆಗಳನ್ನು ಮಾಡಿಲ್ಲ. ಪಕ್ಷದ ವರಿಷ್ಠರು ಏನು ಹೇಳುತ್ತಾರೋ ಅದೇ ಅಂತಿಮ. ವರಿಷ್ಠರು ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತಾರೆ. ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು.

ಕೇಂದ್ರ ಘೊಷಿಸಿರುವ ವಿಶೇಷ ಪ್ಯಾಕೇಜ್ ಬಗ್ಗೆ ಮಾತನಾಡಿ, ಕೇಂದ್ರದಿಂದ 20 ಲಕ್ಷ ಕೋಟಿ ಕೊಡುವಂತಹ ಆಶ್ವಾಸನೆ ಆಶ್ವಾಸನೆಯಾಗಿಯೇ ಉಳಿಯುತ್ತದೆ. ಇದು ಪ್ರಧಾನಮಂತ್ರಿಗಳ ಬೋಗಸ್ ಪ್ಯಾಕೇಜ್. ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಕೊಡುವ ಬಗ್ಗೆ ಕೇಂದ್ರ ಸಹಾಯ ಮಾಡುತ್ತದೆ ಎಂಬ ಬಗ್ಗೆ ಎಲ್ಲಿಯೂ ಉಲ್ಲೇಖಿಸಿಲ್ಲ. ರಾಜ್ಯದಲ್ಲಿರುವ ಬಿಜೆಪಿ ಸರ್ಕಾರವೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಮಾಸ್ಕ್, ಸ್ಯಾನಿಟೈಸರ್, ಕಿಟ್ ಖರೀದಿಯಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸರ್ಕಾರ ತನ್ನ ಕಾರ್ಯ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಲೀಮ್ ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News