ಹೀಗೇ ಮುಂದುವರಿದರೆ ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಬಿಜೆಪಿ ಹಿರಿಯ ಶಾಸಕ ತಿಪ್ಪಾರೆಡ್ಡಿ

Update: 2020-05-29 15:03 GMT

ಚಿತ್ರದುರ್ಗ, ಮೇ 29: ಸರಕಾರದ ವಿರುದ್ಧ ಕೆಲವು ಶಾಸಕರಿಗೆ ಅತೃಪ್ತಿ ಇರುವುದು ಸತ್ಯ ಎಂದು ಹಿರಿಯ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಯಸ್ಸಿಗೆ ಮೀರಿ ಕೆಲಸ ಮಾಡುತ್ತಿದ್ದಾರೆ. ಇವರ ಕೆಲಸದ ವೇಗಕ್ಕೆ ಬಲ ಬರಬೇಕಾದರೆ ಹಿರಿಯ ಶಾಸಕರು ಮತ್ತು ಪಕ್ಷದ ಹಿರಿಯ ಮುಖಂಡರನ್ನು ಗುರುತಿಸಿ ಅವರಿಗೆ ಮಂತ್ರಿ ಪಟ್ಟ ನೀಡಬೇಕೆಂದು ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಭಿನ್ನಮತ ಇರುವುದು ನಿಜ. ಕೂಡಲೇ ಹೈಕಮಾಂಡ್ ಪಕ್ಷದಲ್ಲಿ ಭುಗಿಲೆದ್ದಿರುವ ಅತೃಪ್ತಿಯನ್ನು ಸರಿಪಡಿಸುವ ಅಗತ್ಯವಿದ್ದು, ಈ ಸಂಬಂಧ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನವನ್ನು ಕಾದು ನೋಡುತ್ತೇನೆ ಎಂದರು.

ಸರಕಾರದ ಕಾರ್ಯವೈಖರಿ ಸಮಾಧಾನ ತಂದಿಲ್ಲ. ಹೀಗೇ ಮುಂದುವರಿದರೆ ಮತ್ತೆ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಸರಕಾರದಿಂದ ಯಾವುದೇ ಜಿಲ್ಲೆಗಳ ಅಭಿವೃದ್ಧಿಯಾಗುತ್ತಿಲ್ಲ. ಹಿಂದುಳಿದ ಜಿಲ್ಲೆ ಚಿತ್ರದುರ್ಗಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಭದ್ರಾ ಮೇಲ್ದಂಡೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಮುಂಗಡ ಪತ್ರದಲ್ಲಿ ಜಿಲ್ಲೆಗೆ ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಪಕ್ಷದಲ್ಲಿ ಹಿರಿಯ ಶಾಸಕರನ್ನು ಕಡೆಗಣಿಸಲಾಗುತ್ತಿದೆ. ಸರಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಈ ಹಿಂದೆ ಸಚಿವರಾಗಿದ್ದವರೇ ಮಂತ್ರಿಗಳಾಗುತ್ತಿದ್ದಾರೆ. ಅವರನ್ನು ಕೈಬಿಟ್ಟು ಹಿರಿಯ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮಲು ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಅವರು, ಶ್ರೀರಾಮುಲು 6 ತಿಂಗಳಿಗೊಮ್ಮೆ ಬಂದು ಹೋಗುವ ಉಸ್ತುವಾರಿ ಮಂತ್ರಿಯಾಗಿದ್ದಾರೆ. 6 ತಿಂಗಳಿಗೊಮ್ಮೆ ಕೆಡಿಪಿ ಸಭೆ ನಡೆಸುತ್ತಾರೆ ಎಂದು ವ್ಯಂಗ್ಯವಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News