ರಾಜ್ಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ಸೇವನೆ, ಉಗುಳುವಿಕೆಗೆ ನಿಷೇಧ

Update: 2020-05-30 07:31 GMT

ಬೆಂಗಳೂರು, ಮೇ 30: ಕೋವಿಡ್-19 ಹರಡುವಿಕೆ ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಶುಕ್ರವಾರ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ತಂಬಾಕು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಕೋವಿಡ್-19 ಮತ್ತು ಇತರ ಸಾಂಕ್ರಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೋವಿಡ್-19 ಹೆಚ್ಚುತ್ತಿದ್ದು, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಸಿಎಂಆರ್ ಕೂಡಾ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾಂಕ್ರಮಿಕ ರೋಗ ಹರಡುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ ಸರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಉಗಿಯುವುದನ್ನು ನಿಷೇಧಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿತ್ತು. ಅದರಂತೆ ಸರಕಾರ ಈ ಆದೇಶ ಹೊರಡಿಸಿದೆ.

ಈ ಆದೇಶವನ್ನು ಉಲ್ಲಂಘಿಸಿದರೆ, ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಅಧಿಕಾರಿಯ ಆದೇಶ ಉಲ್ಲಂಘನೆ), 268, 269, 279 (ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು) ಅಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News