ಸಬ್ ಅರ್ಬನ್ ರೈಲ್ವೆ ಯೋಜನೆ: ಕೇಂದ್ರದ ಅಂತಿಮ ಮಂಜೂರಾತಿ ಪಡೆದುಕೊಳ್ಳಲು ಅಧಿಕಾರಿಗಳಿಗೆ ಬಿಎಸ್‌ವೈ ಸೂಚನೆ

Update: 2020-05-30 13:01 GMT

ಬೆಂಗಳೂರು, ಮೇ 30: ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆಗೆ ಕೇಂದ್ರ ಸರಕಾರದ ಅಂತಿಮ ಮಂಜೂರಾತಿಯನ್ನು ಶೀಘ್ರವಾಗಿ ಪಡೆದುಕೊಳ್ಳಲು ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಸೂಚಿಸಿದ್ದಾರೆ.

ಶನಿವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮೂಲಸೌಲಭ್ಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಹಾಸನ-ಮಂಗಳೂರು ರೈಲ್ವೆ ಅಭಿವೃದ್ಧಿ ಕಂಪೆನಿ, ಕುಡಚಿ-ಬಾಗಲಕೋಟೆ ರೈಲ್ವೆ ಯೋಜನೆಯ ಅನುಷ್ಠಾನದಲ್ಲಿನ ಅಡಚಣೆಗಳನ್ನು ಶೀಘ್ರವಾಗಿ ಬಗೆಹರಿಸಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗ ನಿರ್ದೇಶನ ನೀಡಿದರು.

ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೃಷಿ, ಶಿಕ್ಷಣ, ಇಂಧನ, ಆರೋಗ್ಯ, ನೀರಾವರಿ, ಪ್ರವಾಸೋದ್ಯಮ, ಕ್ರೀಡೆ ಮತ್ತು ಯುವಜನ, ಕೈಗಾರಿಕೆ, ಸಾರಿಗೆ ಮತ್ತು ಸಾಗಣೆ, ವಸತಿ, ಗ್ರಾಮೀಣಾಭಿವೃದ್ಧಿ, ದೂರ ಸಂಪರ್ಕ ಸೇರಿದಂತೆ 14 ವಲಯಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮೂಲಸೌಲಭ್ಯಗಳನ್ನು ಕೈಗೊಳ್ಳಲು ಕೇಂದ್ರ ಸರಕಾರ ಆದ್ಯತೆ ನೀಡಿದೆ. ಆದುದರಿಂದ ರಾಜ್ಯದಲ್ಲಿ ಈಗಾಗಲೇ 500 ಕೋಟಿ ರೂ.ಮೌಲ್ಯದ ಸಾರ್ವಜನಿಕ ಖಾಸಗಿ ಸಹಭಾಗಿತ್ವದ (ಪಿಪಿಪಿ) ಯೋಜನೆಗಳನ್ನು ಅನುಮೋದನೆ ನೀಡಲಾಗಿದೆ. ಮೇಲ್ಕಂಡ 14 ವಲಯಗಳಲ್ಲಿ ಪಿಪಿಪಿ ಮಾದರಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಯಡಿಯೂರಪ್ಪ, ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ವಿಮಾನ ನಿಲ್ದಾಣ ಅಭಿವೃದ್ಧಿ, ಬೆಮಗಳೂರು ಸಿಗ್ನೇಚರ್ ಬುಸಿನೆಸ್ ಪಾರ್ಕ್ ಯೋಜನೆಗಳಲ್ಲಿ ಪ್ರಗತಿ ಸಾಧಿಸಬೇಕು. ರಾಜ್ಯದ ಶಿವಮೊಗ್ಗ-ರಾಣೆಬೆನ್ನೂರು ಮಾರ್ಗದಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಪ್ರಸ್ತುತ ಏಳು ನೂತನ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿದ್ದು, ಅವುಗಳ ತ್ವರಿತ ಅನುಷ್ಠಾನಕ್ಕೆ ಆಸ್ಥೆ ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಹಾಗೂ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News