ರಾಜ್ಯಕ್ಕೆ ಮುಂದಿನ ವಾರ ಮುಂಗಾರು ಪ್ರವೇಶ: ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ

Update: 2020-05-30 15:31 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 30: ಮುಂದಿನ ವಾರ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ ಜೂನ್ 1ರಂದು ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಜೂನ್ 3 ಇಲ್ಲವೇ 4ರಂದು ಕರ್ನಾಟಕದ ಕರಾವಳಿಗೆ ಪ್ರವೇಶಿಸಲಿದೆ ಎಂದು ಕೇಂದ್ರದ ನಿರ್ದೇಶಕ ಡಾ. ಶ್ರೀನಿವಾಸರೆಡ್ಡಿ ಮಾಹಿತಿ ನೀಡಿದ್ದಾರೆ.

ಅರಬ್ಬೀ ಸಮುದ್ರದಲ್ಲಿ, ಕೇರಳ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವುದರಿಂದ ಮುಂದಿನ ಎರಡು ದಿನಗಳಲ್ಲಿ ವಾಯುಭಾರ ಕುಸಿತವಾಗಲಿದೆ. ಈ ಪರಿಣಾಮವಾಗಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ರವಿವಾರದಿಂದಲೇ ಕೆಲವೆಡೆ ಭಾರೀ ಮಳೆಯಾಗಲಿದೆ. ಕಳೆದ ಮೂರ್ನಾಲ್ಕು ದಿನದಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಆದರೆ, ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗಿರಲಿಲ್ಲ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಮೇ 31ರ ನಂತರ ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲೂ ಮೇಲ್ಮೈ ಸುಳಿಗಾಳಿಯಿಂದಾಗಿ ಆಂಧ್ರದಿಂದ ತಮಿಳುನಾಡಿನವರೆಗೆ ಮಳೆ ಬರುವ ನಿರೀಕ್ಷೆ ಇದ್ದು, ಇದರಿಂದ ರಾಜ್ಯದ ಉತ್ತರ ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ವಿವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News