ಎಂಎಚ್‍ಆರ್ ಡಿ ಮಾರ್ಗದರ್ಶಿಯಂತೆ ಶೈಕ್ಷಣಿಕ ಚಟುವಟಿಕೆ: ಸುರೇಶ್‍ ಕುಮಾರ್

Update: 2020-05-30 18:04 GMT

ಬೆಂಗಳೂರು, ಮೇ 30: ಕೋವಿಡ್-19 ಸಂದರ್ಭದಲ್ಲಿ ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯದ ಮಾರ್ಗದರ್ಶಿ ಸೂತ್ರದ ಆಧಾರದಲ್ಲಿ ರಾಜ್ಯದ ಅಗತ್ಯತೆಗಳಿಗನುಗುಣವಾಗಿ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ರೂಪಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‍ ಕುಮಾರ್ ತಿಳಿಸಿದ್ದಾರೆ.

ಶನಿವಾರ ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ಗಳನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಹಾಗೂ ಎಂಬೆಸಿ ಗ್ರೂಪ್ ಕಂಪೆನಿಗಳು ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿದ ಸಮಾರಂಭದಲ್ಲಿ ಮಾತನಾಡಿದ ಅವರು, ಕೋವಿಡ್-19 ಶೈಕ್ಷಣಿಕ ವರ್ಷ, ಶಾಲಾ ಅವಧಿ, ಪಠ್ಯದ ಇತಿಮಿತಿ ಸೇರಿದಂತೆ ಶೈಕ್ಷಣಿಕ ಚಟುವಟಿಕೆಗಳನ್ನು ರಾಜ್ಯದ ಅವಶ್ಯಕತೆ ಅನುಸಾರವಾಗಿ ರೂಪಿಸಲಾಗುವುದು ಎಂದರು.

ಇಡೀ ವಿಶ್ವವೇ ಕೊರೋನದಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ನಾವೆಲ್ಲರೂ ಒಟ್ಟಾಗಿ ಸಂಘಟನಾ ಸ್ಫೂರ್ತಿಯಿಂದ ಕೆಲಸ ಮಾಡಬೇಕಾಗಿದೆ. ಹಾಗೆಯೇ ಎಸೆಸೆಲ್ಸಿ ವಿದ್ಯಾರ್ಥಿಗಳು ಇಂತಹ ಸಮಯದಲ್ಲಿ ಪರೀಕ್ಷೆ ಎದುರಿಸಬೇಕಾಗಿರುವುದರಿಂದ ಅವರಿಗೆ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎಂಬೆಸಿ ಕಂಪೆನಿಗಳು ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುತ್ತಿರುವುದು ಶ್ಲಾಘನೀಯ ವಿಚಾರವೆಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ಮಾತನಾಡಿ, ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತಾಗಲಿ ಎಂಬ ಸದುದ್ದೇಶದಿಂದ ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರನ್ನು ವಿತರಿಸಿದ್ದೇವೆಂದು ತಿಳಿಸಿದ್ದಾರೆ.

ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಆಯುಕ್ತ ಡಾ.ಕೆ.ಜಿ.ಜಗದೀಶ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಷಣ್ಮುಖಪ್ಪ ಕೊಂಡಜ್ಜಿ ಸೇರಿ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News