ಜಿಲ್ಲಾಧಿಕಾರಿಗಳು ತಾಲೂಕು ಕೇಂದ್ರಗಳಲ್ಲಿ ವಾಸ್ತವ್ಯ ಹೂಡಿ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಸಿಎಂ ಸೂಚನೆ

Update: 2020-06-02 07:12 GMT

ಬೆಂಗಳೂರು, ಜೂ.2: ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ತಾಲೂಕುಗಳನ್ನು ವಿಭಾಗಿಸಿಕೊಂಡು ತಾಲೂಕು ಕೇಂದ್ರಗಳಲ್ಲಿ ವಾಸ ಮಾಡಿ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ. 

ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಇಂದು ಕಲಬುರ್ಗಿ, ವಿಜಯಪುರ, ಉಡುಪಿ, ಯಾದಗಿರಿ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದದಲ್ಲಿ ಮಾತನಾಡುತ್ತಿದ್ದರು.  

ತಾಲೂಕು ಕೇಂದ್ರಗಳಲ್ಲಿಯೇ ಮೊಕ್ಕಾಂ ಹೂಡಿ ಮೇಲ್ವಿಚಾರಣೆ ಮಾಡುವಂತೆ ಸೂಚಿಸಿದ ಮುಖ್ಯಮಂತ್ರಿ, ಜೂನ್ 8ರಿಂದ ಸಡಿಲಿಕೆಗಳನ್ನು ಮಾಡುತ್ತಿರುವುದರಿಂದ ಕಟ್ಟೆಚ್ಚರ ವಹಿಸಿ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.  

ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ವಲಸಿಗರಿಂದ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಣಕ್ಕೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. 

ಕೋವಿಡ್-19 ಪರೀಕ್ಷಾ ಕಿಟ್‍ಗಳ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ಹೋಂ ಕ್ವಾರಂಟೈನ್ ನಲ್ಲಿರುವವರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಬೇಕು. ಪೊಲೀಸ್ ಇಲಾಖೆಯ ವತಿಯಿಂದ ಹೋಂ ಕ್ವಾರಂಟೈನ್ ನಲ್ಲಿರುವವರ ಮನೆಯ ಬಳಿ ಪೇದೆಗಳನ್ನು ನಿಯೋಜಿಸಬೇಕಲ್ಲದೆ, ಗ್ರಾಮ ಪಂಚಾಯತ್ ಗಳಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ಇವರ ಬಗ್ಗೆ ನಿಗಾ ವಹಿಸಬೇಕು. ಗ್ರಾಮ ಪಂಚಾಯತ್ ಗಳ ಸದಸ್ಯರಿಗೆ ಈ ಬಗ್ಗೆ ತರಬೇತಿಯನ್ನೂ  ನೀಡಲಾಗಿದ್ದು,  ಬೂತ್ ಮಟ್ಟದ ತಂಡಗಳೂ ಪ್ರತಿ ದಿನ ವರದಿ ಸಲ್ಲಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. 

ಪ್ರತಿ ಗ್ರಾಮ ಹಾಗೂ  ನಗರಗಳಲ್ಲಿ ವಾರ್ಡ್ ಮಟ್ಟದಲ್ಲಿ ಕಾವಲು ಸಮಿತಿಗಳನ್ನು ರಚಿಸಬೇಕಲ್ಲದೆ, ಈ  ಮಿತಿಗಳು ಕ್ರಿಯಾಶೀಲವಾಗಿದ್ದು, ಹೋಂ ಕ್ವಾರಂಟೈನ್ ಉಲ್ಲಂಘನೆಯಾದರೆ ಎಫ್.ಐ.ಆರ್. ದಾಖಲಿಸಬೇಕು ಎಂದು ಮುಖ್ಯಮಂತ್ರಿ ನಿರ್ದೇಶಿಸಿದರು.  

ಗಡಿ ಭಾಗಗಳಿರುವ ಜಿಲ್ಲೆಗಳು ಕಟ್ಟುನಿಟ್ಟಾಗಿ ಗಡಿ ಪ್ರದೇಶಗಳನ್ನು ಕಾಯ್ದು, ಅಕ್ರಮ ಪ್ರವೇಶವನ್ನು ತಡೆಯಬೇಕು. ಮೃತ ದೇಹಗಳನ್ನು ಯಾವುದೇ ಕಾರಣಕ್ಕೂ ರಾಜ್ಯದೊಳಗೆ ತರದಂತೆ ನೋಡಿಕೊಳ್ಳಬೇಕೆಂದು ನಿರ್ದೇಶಿಸಿದರು.

ಎಸೆಸೆಲ್ಸಿ/ಪಿಯುಸಿ ಪರೀಕ್ಷಾ ದಿನಾಂಕಗಳು ನಿಗದಿಯಾಗಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸೂಚಿಸಿದರು. 

ಗೃಹಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ ಅಖ್ತರ್ ಹಾಗೂ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News