ಶಾಲೆ ಆರಂಭದ ಕುರಿತು ಪೋಷಕರಿಂದ ಅಭಿಪ್ರಾಯ ಸಂಗ್ರಹ: ಸುರೇಶ್ ಕುಮಾರ್

Update: 2020-06-02 11:58 GMT

ಬೆಂಗಳೂರು, ಜೂ.2: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವುದರ ಕುರಿತು ಪೋಷಕರು ಹಾಗೂ ಎಸ್‍ಡಿಎಂಸಿ ಸದಸ್ಯರಿಂದ ಅಭಿಪ್ರಾಯ ಸಂಗ್ರಹಿಸಿ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ.

ಎಲ್ಲ ಸರಕಾರಿ ಹಾಗೂ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಜೂ.10ರಿಂದ 12ರೊಳಗೆ ತಮ್ಮ ಶಾಲೆಗೆ ಸಂಬಂಧಿಸಿದ ಪೋಷಕರು, ಎಸ್‍ಡಿಎಂಸಿ ಸದಸ್ಯರ ಸಭೆ ಕರೆದು ಶಾಲೆಗಳ ಪುನರಾರಂಭದ ಕುರಿತು ಅಭಿಪ್ರಾಯ ಸಂಗ್ರಹಿಸಬೇಕು.

ಪೋಷಕರ ಜತೆ ನಡೆಸುವ ಸಭೆಯಲ್ಲಿ ಮುಖ್ಯವಾಗಿ ಶಾಲೆಗಳನ್ನು ಪುನರಾರಂಭ ಮಾಡಬಹುದಾದ ದಿನಾಂಕ, ಕೋವಿಡ್-19ರ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವ ವಿಧಾನದ ಬಗ್ಗೆ ಹಾಗೂ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಹೆಚ್ಚಿನ ಸಲಹೆ, ಸೂಚನೆಗಳನ್ನು ನಿರೀಕ್ಷಿಸಲಾಗಿದೆ.

ರಾಜ್ಯದ ಎಲ್ಲ ಪೋಷಕರು ಮತ್ತು ಎಸ್‍ಡಿಎಂಸಿ ಸದಸ್ಯರು ತಮಗೆ ಸಂಬಂಧಿಸಿದ ಶಾಲೆಯ ಮುಖ್ಯೋಪಾಧ್ಯಾಯರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕೆಂದು ಸಚಿವ ಸುರೇಶ್‍ಕುಮಾರ್ ಪ್ರಕಟನೆಯ ಮೂಲಕ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News