ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರೀ ಮಳೆ: ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗೆ

Update: 2020-06-03 13:09 GMT

ಚಿಕ್ಕಮಗಳೂರು, ಜೂ.3: ನಿಸರ್ಗ ಚಂಡಮಾರುತದ ಎಫೆಕ್ಟ್ ಕಾಫಿನಾಡಿನ ಮೇಲೂ ಪರಿಣಾಮ ಭೀರಿದ್ದು, ಬುಧವಾರ ಜಿಲ್ಲಾದ್ಯಂತ ಬೆಳಗಿನಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲೆಯ ಬಯಲುಸೀಮೆ ಭಾಗದ ತಾಲೂಕು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಿದ್ದರೆ, ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಧಾರಾಕಾರ ಮಳೆಯೊಂದಿಗೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆಗಳು ವರದಿಯಾಗಿವೆ.

ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಆಗಾಗ್ಗೆ ಸಂಜೆ ಮತ್ತು ರಾತ್ರಿ ವೇಳೆ ಉತ್ತಮ ಮಳೆಯಾಗುತ್ತಿದೆ. ಸತತ ನಾಲ್ಕು ದಿನಗಳಿಂದಲೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಬುಧವಾರ ಬೆಳಗ್ಗೆ ಇಡೀ ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಚಿಕ್ಕಮಗಳೂರು ತಾಲೂಕು ಸೇರಿದಂತೆ ಕಡೂರು, ತರೀಕೆರೆ ಭಾಗದಲ್ಲಿ ಮಧ್ಯಾಹ್ನದ ವೇಳೆ ಸಾಧಾರಣ ಗಾಳಿಯೊಂದಿಗೆ ತುಂತುರು ಮಳೆ ಮಾತ್ರ ಸುರಿಯಿತು.

ಆದರೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಧಾರಾಕಾರ ಮಳೆ ಸುರಿದಿದೆ. ಮಳೆಯೊಂದಿಗೆ ಭಾರೀ ಗಾಳಿ ಬೀಸಿದ್ದು, ಅಲ್ಲಲ್ಲಿ ರಸ್ತೆ ಬದಿಯಲ್ಲಿದ್ದ ಬೃಹತ್ ಮರಗಳು ಧರೆಗುರುಳಿದ್ದು, ಕೆಲವೆಡೆ ವಿದ್ಯುತ್ ಕಂಬಗಳ ಮೇಲೆ ಮರ ಉರುಳಿಬಿದ್ದ ಪರಿಣಾಮ ಮಲೆನಾಡಿನ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. 

ಮೂಡಿಗೆರೆ ತಾಲೂಕಿನಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು, ಕೊಟ್ಟಿಗೆಹಾರ, ಬಣಕಲ್, ಬಾಳೂರು, ಜಾವಳಿ, ಕಳಸ, ಕುದುರೆಮುಖ, ಚಾರ್ಮಾಡಿ ಭಾಗದಲ್ಲಿ ಬೆಳಗಿನಿಂದಲೇ ತುಂತುರು ಮಳೆಯಾಗಿದ್ದು, ಮಧ್ಯಾಹ್ನ, ಸಂಜೆ ವೇಳೆ ಉತ್ತಮ ಮಳೆಯಾದ ಬಗ್ಗೆ ವರದಿಯಾಗಿದೆ. ತಾಲೂಕಿನ ಅಣಜೂರು-ಜನ್ನಾಪುರ ಗ್ರಾಮಗಳ ಸಂಪರ್ಕದ ರಾಜ್ಯ ಹೆದ್ದಾರಿಯ ಮೇಲೆ ಬುಧವಾರ ಬೃಹತ್ ಮರವೊಂದು ಭಾರೀ ಗಾಳಿಗೆ ಉರುಳಿ ಬಿದ್ದ ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರ ಸುಮಾರು 1 ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿತ್ತು. 

ರಸ್ತೆ ಮೇಲೆ ಮರ ಬಿದ್ದ ಪರಿಣಾಮ ಈ ರಸ್ತೆಯ ಎರಡೂ ಬದಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡು ಬಂದವು. ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಮರವನ್ನು ತುಂಡರಿಸಿ ಮರ ತೆರವು ಮಾಡಿದ ಬಳಿಕ ರಸ್ತೆಯಲ್ಲಿ ವಾಹನಗಳ ಸಂಚಾರ ಸಾಧ್ಯವಾಯಿತು. ಮರ ರಸ್ತೆ ಬದಿಯ ವಿದ್ಯುತ್ ಕಂಬದ ಮೇಲೂ ಉರುಳಿದ್ದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಈ ಭಾಗದಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿತ್ತು.

ಉಳಿದಂತೆ ಜಿಲ್ಲೆಯ ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲೂಕುಗಳ ವ್ಯಾಪ್ತಿಯಲ್ಲೂ ಬುಧವಾರ ಬೆಳಗಿನಿಂದ ಸಂಜೆವರೆಗೂ ಸಾಧಾರಣ ಗಾಳಿ ಮಳೆಯಾಗಿದ್ದು, ಮೋಡಕವಿದ ವಾತಾವರಣ ಹಾಗೂ ನಿರಂತರವಾಗಿ ಸುರಿದ ಸಾಧಾರಣ ಮಳೆಯಿಂದಾಗಿ ಜನಜೀವನವೂ ಅಸ್ತವ್ಯಸ್ತಗೊಂಡಿತ್ತು. ಗಾಳಿ ಮಳೆಯಿಂದಾಗಿ ಈ ತಾಲೂಕುಗಳ ವ್ಯಾಪ್ತಿಯಲ್ಲಿ ಕೆಲವಡೆ ರಸ್ತೆ ಬದಿಯ ಮರಗಳು ಉರುಳಿಬಿದ್ದಿದ್ದು, ಕೆಲವೆಡೆ ವಿದ್ಯುತ್ ಕಂಬಗಳೂ ತುಂಡಾಗಿ, ವಿದ್ಯುತ್ ಸಂಪರ್ಕವೂ ಕಡಿತಗೊಂಡಿರುವ ಬಗ್ಗೆ ವರದಿಯಾಗಿದೆ.

ಜಿಲ್ಲೆಯಲ್ಲಿ ಜೂನ್ ತಿಂಗಳ ಆರಂಭದಲ್ಲಿ ಉತ್ತಮ ಮಳೆಯಾಗಿರುವುದರಿಂದ ಈ ಬಾರಿ ಮಳೆಗಾಲದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ರೈತರು, ಕಾಫಿ, ಅಡಿಕೆ ಬೆಳೆಗಾರರು ವ್ಯಕ್ತಪಡಿಸಿದ್ದು, ಉತ್ತಮ ಮಳೆಯಿಂದಾಗಿ ಜಿಲ್ಲಾದ್ಯಂತ ಕೃಷಿ ಚಟುವಟಿಕೆಗಳು ಗರಿಗೆದರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News