ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೆಸ್ಸೆಸ್ ಮುಖಂಡನ ವಿರುದ್ಧ ಮೈಸೂರು ಜಿಲ್ಲಾ ಕಾಂಗ್ರೆಸ್ ದೂರು

Update: 2020-06-03 16:53 GMT

ಮೈಸೂರು,ಜೂ.3: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳ ಪದ ಬಳಕೆ ಮಾಡಿದ ಆರೋಪದ ಮೇಲೆ ವ್ಯಕ್ತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪೊಲೀಸರಿಗೆ ದೂರು ಸಲ್ಲಿಸಲಾಯಿತು.

ಸಾಮಾಜಿಕ ಜಾಲತಾಣದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಕೆಟ್ಟದಾಗಿ ಹೇಳಿಕೆ ನೀಡಿರುವ ಪುನೀತ್ ಕೆರೆಹಳ್ಳಿ ವಿರುದ್ಧ ನಗರದ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಪುನೀತ್ ಕೆರೆಹಳ್ಳಿ ಒಬ್ಬ ಬಿಜೆಪಿ, ಆರೆಸ್ಸೆಸ್ ಮೂಲದವ. ಆತ ವಾರದಲ್ಲಿ ಈ ರೀತಿ ಮೂರ್ನಾಲ್ಕು ವಿವಾದಾತ್ಮಕ ಪೋಸ್ಟ್ ಗಳನ್ನು ಹಾಕುತ್ತಿದ್ದಾನೆ. ಆತನಿಗೆ ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡುವುದೇ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕರ ಬಗ್ಗೆ ಅವಾಚ್ಯ ಪದ ಬಳಸಿ ಪದೇ ಪದೇ ಪೋಸ್ಟ್ ಮಾಡುತ್ತಿದ್ದು, ಇದು ಸರಿಯಾದ ಬೆಳವಣಿಗೆಯಲ್ಲ. ಈತನ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಸಿದರು. ರಾಜ್ಯದಲ್ಲಿ ಸೈಬರ್ ಕ್ರೈಂ ಇದೆ. ರಾಷ್ಟ್ರಮಟ್ಟದಲ್ಲೂ ದೊಡ್ಡ ತಂಡವೇ ಇದೆ. ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಹೇಳಿಕೆ ಕೊಟ್ಟವರ ಬಗ್ಗೆ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.

ಈ ವೇಳೆ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕಾಂಗ್ರೆಸ್ ಮುಖಂಡ ಶಿವಣ್ಣ, ಕೆಪಿಸಿಸಿ ಸದಸ್ಯ ಹೆಡತಲೆ ಮಂಜುನಾಥ್, ಕಾರ್ಯದರ್ಶಿ ಶಿವು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News