ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

Update: 2020-06-05 13:15 GMT

ಬೆಂಗಳೂರು, ಜೂ.5: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂ.19ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಆಯ್ಕೆ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.

ಸೋಲಿಲ್ಲದ ಸರದಾರ ಎಂದು ಬಿಂಬಿತರಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ವಿರುದ್ಧ ಕಲಬುರಗಿಯಲ್ಲಿ ಪರಾಭವಗೊಂಡಿದ್ದರು. ಇದೀಗ ರಾಜ್ಯಸಭೆ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸತ್ ಪ್ರವೇಶಿಸಲು ವೇದಿಕೆ ಸಿದ್ಧವಾಗಿದೆ.

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಈ ವಿಚಾರದಲ್ಲಿ ರಾಷ್ಟ್ರೀಯ ನಾಯಕರು ರಾಷ್ಟ್ರಮಟ್ಟದಲ್ಲಿ ತೆಗೆದುಕೊಂಡಿರುವ ತೀರ್ಮಾನ. ಇವತ್ತಿನವರೆಗೂ ಈ ಬಗ್ಗೆ ನನ್ನ ಬಳಿ ಯಾರೂ ಚರ್ಚೆ ಮಾಡಿಲ್ಲ. ರಾಷ್ಟ್ರೀಯ ನಾಯಕರು ನಮಗೆ ನೀಡುವ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದರು.

ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕಾಂಗ್ರೆಸ್ ಬೆಂಬಲ ನೀಡುವ ಕುರಿತು ಸೋನಿಯಾಗಾಂಧಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಶಿವಕುಮಾರ್ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿರಿಯರಿದ್ದಾರೆ. ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ನಮ್ಮ ಅಧ್ಯಕ್ಷೆ ಸೋನಿಯಾ ಗಾಂಧಿ ನಮಗೆ ನೀಡುವ ಆದೇಶವನ್ನು ನಾವು ಪಾಲಿಸುತ್ತೇವೆ. ಇದು ಪಕ್ಷದ ಅಧ್ಯಕ್ಷನಾಗಿ ನನ್ನ ಅಭಿಪ್ರಾಯ ಎಂದು ಅವರು ಹೇಳಿದರು.

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಹಿರಿಯ ಮುತ್ಸದ್ದಿ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು. ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ನಮ್ಮ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ನಾಯಕರಾದ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News