ಪೌರ ಕಾರ್ಮಿಕರ ಹುದ್ದೆ ಭರ್ತಿ ಮಾಡಲು ಸಿಎಂ ಯಡಿಯೂರಪ್ಪ ಸೂಚನೆ

Update: 2020-06-05 14:41 GMT

ಬೆಂಗಳೂರು, ಜೂ.5: ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿಯಡಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ನಿವೃತ್ತಿ, ಮರಣ ಅಥವಾ ಇತರ ಕಾರಣಗಳಿಂದ ತೆರವಾಗಿರುವಂತಹ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಕೇಂದ್ರ ಸರಕಾರದ ನೆರವಿನ ಅಮೃತ್ ಯೋಜನೆಯಡಿ ಕೇಂದ್ರದ ಪಾಲಿನ ಬಾಕಿ ಅನುದಾನ ಪಡೆಯಲು ರಾಜ್ಯದ ಪಾಲಿನ ಭಾಗವಾಗಿ 209 ಕೋಟಿ ರೂ. ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಿಳಿಸಿದರು.

ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸುವಂತೆ ಸೂಚಿಸಿದ ಅವರು, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಬಳಿ 47.24 ಕೋಟಿ ರೂ. ಲಭ್ಯವಿದೆ. ಎಪ್ರಿಲ್ ಅಂತ್ಯದ ವರೆಗೆ 12 ನಗರಗಳಲ್ಲಿ ಖಾಸಗಿ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗಿದೆ ಎಂದರು.

ಮುಂದಿನ ಎರಡು ತಿಂಗಳಲ್ಲಿ 23 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದ್ದು, ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಜನರು ನೀರಿಗಾಗಿ ಪರದಾಡಬಾರದು ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಬರುವ ಅನುದಾನಕ್ಕೆ ಯಾವುದೇ ತೊಡಕಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದ ಅವರು, ಕೋವಿಡ್-19 ನಿರ್ವಹಣೆಗೆ ಸಂಬಂಧಿಸಿದಂತೆ ನಗರ ಸ್ಥಳೀಯ ಸಂಸ್ಥೆಗಳು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಪೌರಾಡಳಿತ ಸಚಿವ ನಾರಾಯಣಗೌಡ, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಪ್ರಧಾನ ಕಾರ್ಯದರ್ಶಿ ಡಾ.ಜೆ.ರವಿಶಂಕರ್, ಪೌರಾಡಳಿತ ಇಲಾಖೆ ನಿರ್ದೇಶಕಿ ಬಿ.ಬಿ.ಕಾವೇರಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News