ಕೊಡಗಿನಲ್ಲಿ ಶೀತ-ಜ್ವರ ಲಕ್ಷಣವಿರುವ ಎಲ್ಲರಿಗೂ ಆರೋಗ್ಯ ಪರೀಕ್ಷೆ: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ

Update: 2020-06-05 16:51 GMT

ಮಡಿಕೇರಿ ಜೂ.5 : ಕೊಡಗು ಜಿಲ್ಲೆಯ ಜನತೆಯ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಕೋವಿಡ್-19 ರ ಸೋಂಕು ಹರಡುವುದನ್ನು ಸ್ವಲ್ಪ ಮಟ್ಟಿಗೆ ತಡೆಗಟ್ಟಲಾಗಿದ್ದರೂ, ಈ ಪ್ರಕರಣಗಳ ಬಗ್ಗೆ ಉತ್ತಮ ನಿಗಾವಹಿಸುವ ನಿಟ್ಟಿನಲ್ಲಿ ಎಲ್ಲಾ ಜ್ವರ, ಕೆಮ್ಮು ಮತ್ತು ಶೀತ ಲಕ್ಷಣ ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಇದಕ್ಕಾಗಿ ಪ್ರಾರ್ಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಫೀವರ್ ಕ್ಲಿನಿಕ್‍ಗಳು, ತಾಲೂಕು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆ ಮತ್ತು ಅಶ್ವಿನಿ ಆಸ್ಪತ್ರೆಗಳ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡುವ ಮೂಲಕ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಜ್ವರ, ಶೀತ, ಕೆಮ್ಮು ಲಕ್ಷಣಗಳಿರುವ ರೋಗಿಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸುವಂತೆ ಖಾಸಗಿ ಆಸ್ಪತ್ರೆ/ಕ್ಲಿನಿಕ್ ಗಳಿಗೆ ನಿರ್ದೇಶನ ನೀಡಲಾಗಿದೆ. ಇಂತಹ ರೋಗಿಗಳ ಗಂಟಲು/ಮೂಗು ದ್ರವ ಮಾದರಿಗಳನ್ನು ಅದೇ ದಿನ ಸಂಗ್ರಹಿಸಲಾಗುತ್ತದೆ ಮತ್ತು ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳದೇ ಅದೇ ದಿನ ಮನೆಗೆ ಕಳುಹಿಸಲಾಗುವುದು. ಜಿಲ್ಲೆಯಲ್ಲಿ ಕೋವಿಡ್-19ರ ಸಂಬಂಧ ಮುಂಜಾಗ್ರತಾ ಕ್ರಮಗಳ ಸುಧಾರಣೆಯ ಭಾಗವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

227 ಮಂದಿ ಕ್ವಾರಂಟೈನ್: ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರಂತೆ ಇತರೆ ದೇಶ, ರಾಜ್ಯಗಳಿಂದ ಪಾಸ್‍ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ ನಿಯಮಾನುಸಾರ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕಳೆದ 14 ದಿನಗಳಲ್ಲಿ ಇತರ ದೇಶಗಳಿಂದ 40, ಇತರ ರಾಜ್ಯದ 187 ಮಂದಿ ಸೇರಿದಂತೆ ಒಟ್ಟು 227 ಮಂದಿ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿದ್ದು, ಅವರನ್ನು ಸಂಪರ್ಕ ತಡೆಯಲ್ಲಿರಿಸಲಾಗಿದೆ ಎಂದು ಅವರು  ಮಾಹಿತಿ ನೀಡಿದ್ದಾರೆ.

3,118 ವರದಿ ನೆಗೆಟಿವ್: ಇಲ್ಲಿಯವರೆಗೆ ಒಟ್ಟು 3,289 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 3,118 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಮೂರು ಪ್ರಕರಣಗಳಲ್ಲಿ ಮಾತ್ರ ಪಾಸಿಟಿವ್ ಬಂದಿದ್ದು,ಈ ಪೈಕಿ ಒಬ್ಬರು ಗುಣಮುಖರಾಗಿದ್ದಾರೆ. ಉಳಿದ ಇಬ್ಬರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 168 ಮಂದಿಯ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, 69 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಅವರು ವಿವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News