ಪಶುಪಾಲಕರು, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿಸ್ತರಣೆ: ಸಿಎಂ ಯಡಿಯೂರಪ್ಪ

Update: 2020-06-05 17:43 GMT

ಬೆಂಗಳೂರು, ಜೂ. 5: ಕೇಂದ್ರ ಸರಕಾರವು ಪಶುಪಾಲಕರು ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ವಿಸ್ತರಿಸಲು ಅನುಮತಿ ನೀಡಿದ್ದು, ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀಡಿದ್ದಾರೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಪ್ರಗತಿಪರಿಶೀಲನಾ ಸಭೆ ನಡೆಸಿದ ಅವರು, ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಪಶುಪಾಲನಾ ಚಟುವಟಿಕೆಗೆ 1 ಲಕ್ಷ ರೂ.ನಿಂದ 3 ಲಕ್ಷ ರೂ.ಗಳ ವರೆಗೆ ಬಡ್ಡಿ ರಹಿತ ಮುಂಗಡ ಪಡೆಯಬಹುದಾಗಿದೆ. ಇದರ ಸದುಪಯೋಗಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

ಲಸಿಕೆ ಉತ್ಪಾದನೆ: ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರ ಜಿಲ್ಲೆ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕಾಯಿಲೆ ನಿಯಂತ್ರಣಕ್ಕೆ ಲಸಿಕೆ ಉತ್ಪಾದನೆ ಹೆಚ್ಚಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಕೊರೋನ ಸೋಂಕು ತಡೆಗೆ ಹೇರಿದ್ದ ಲಾಕ್‍ಡೌನ್ ಸಂದರ್ಭದಲ್ಲಿ 80 ಕೋಟಿ ರೂ.ವೆಚ್ಚದಲ್ಲಿ ಕೊಳಗೇರಿಗಳಲ್ಲಿ ಪ್ರತಿನಿತ್ಯ 7.75ಲಕ್ಷ ಲೀಟರ್ ಹಾಲನ್ನು ಉಚಿತವಾಗಿ ವಿತರಣೆ ಮಾಡಲಾಗಿದೆ. ಅಲ್ಲದೆ,  ಮಾಂಸ ಸಾಗಾಣಿಕೆ ಸರಪಳಿ ಸಮರ್ಪಕವಾಗಿ ನಿರ್ವಹಿಸಲು ಸೂಕ್ತ ಮುನ್ನಚ್ಚರಿಕೆ ವಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹಕ್ಕಿ ಜ್ವರ ನಿಯಂತ್ರಣ: ಕೊರೋನ ಸೋಂಕು ತಡೆಗೆ ವಿಧಿಸಿದ್ದ ಲಾಕ್‍ಡೌನ್ ಅವಧಿಯಲ್ಲೇ ಮೈಸೂರು ಮತ್ತು ದಾವಣಗೆರೆ ಜಿಲ್ಲೆಯ ಕೆಲಭಾಗಗಳಲ್ಲಿ ಕಾಣಿಸಿಕೊಂಡಿದ್ದ ಕೋಳಿ ಜ್ವರ ಹಾಗೂ ಬೀದರ್ ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದ ಹಂದಿ ಜ್ವರ ನಿಯಂತ್ರಣಕ್ಕೆ ಇಲಾಖೆ ಅತ್ಯಂತ ಯಶಸ್ವಿಯಾಗಿ ಕ್ರಮ ವಹಿಸಿದೆ ಎಂದು ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಪಶು ಸಂಗೋಪನಾ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News