ಹಿರಿಯ ನಾಗರಿಕರ ಸಂಚಾರಕ್ಕೆ ನಿರ್ಬಂಧ: ಸ್ಪಷ್ಟನೆ ನೀಡಲು ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2020-06-06 17:12 GMT

ಬೆಂಗಳೂರು, ಜೂ.6: ಕೊರೋನ ನಿಯಂತ್ರಿಸುವ ಹಿನ್ನೆಲೆಯಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‍ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸರಕಾರ, ನಾವು ನಿರ್ಬಂಧ ಹೇರಿಲ್ಲ. ಬದಲಿಗೆ ಆರೋಗ್ಯದ ಹಿತದೃಷ್ಟಿಯಿಂದ ಸಲಹೆ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದೆ.

65 ವರ್ಷ ವಯಸ್ಸು ದಾಟಿದ ಹಿರಿಯ ನಾಗರಿಕರು ಮನೆಯಿಂದ ಹೊರಬರಬಾರದು ಎಂದು ಕೇಂದ್ರ ಸರಕಾರ ಆದೇಶಿಸಿದ್ದ ಕ್ರಮ ಪ್ರಶ್ನಿಸಿ ಬೆಂಗಳೂರಿನ ಬಿ.ಎನ್.ಜಯದೇವ ಎಂಬುವರು ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ, ಆದೇಶಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನಿರ್ದೇಶಿಸಿತ್ತು.

ಅರ್ಜಿ ವಿಚಾರಣೆಗೆ ಬಂದ ಸಂದರ್ಭದಲ್ಲಿ ಕೇಂದ್ರ ಸರಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಕೊರೋನ ವೈರಸ್ ನಿಯಂತ್ರಿಸಲು ಹಾಗೂ ಸುರಕ್ಷತೆ ದೃಷ್ಟಿಯಿಂದ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಹಿರಿಯ ನಾಗರಿಕರು ಮನೆಯಿಂದ ಹೊರಬರಬಾರದು ಎಂದು ಆದೇಶ ಹೊರಡಿಸಲಾಗಿತ್ತು. ಇದೀಗ ಆದೇಶವನ್ನು ಹಿಂಪಡೆಯಲಾಗಿದೆ.

ಮುಖ್ಯವಾಗಿ ಹಿರಿಯ ನಾಗರಿಕರ ವಿಚಾರದಲ್ಲಿ ಕಟ್ಟಪ್ಪಣೆ ಮಾಡಿರಲಿಲ್ಲ. ವಯಸ್ಸಾದಂತೆ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತದೆ ಎಂಬ ವೈದ್ಯರ ಶಿಫಾರಸು ಆಧಾರದಲ್ಲಿ ಹಿರಿಯ ನಾಗರಿಕರಿಗೆ ಮನೆಯಿಂದ ಹೊರಗೆ ಬರಬೇಡಿ ಎಂದು ಸಲಹೆ ನೀಡಿದ್ದೆವು ಎಂದು ಸರಕಾರಿ ವಕೀಲರು ಸ್ಪಷ್ಟಪಡಿಸಿದರು. ಸರಕಾರದ ಪರ ವಕೀಲರ ಲಿಖಿತ ಹೇಳಿಕೆ ದಾಖಲಿಸಿಕೊಂಡ ಪೀಠ ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿತು.

ಹಿರಿಯ ನಾಗರಿಕರು ಮನೆಯಿಂದ ಹೊರ ಬರಬಾರದು ಎಂದು ಕೇಂದ್ರ ಸರಕಾರ ಕೆಲ ದಿನಗಳ ಹಿಂದೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದ ಜಯದೇವ ಎಂಬುವರು, ಹಿರಿಯರ ಸಂಚಾರಕ್ಕೆ ನಿರ್ಬಂಧ ವಿಧಿಸಿರುವ ಕ್ರಮ ಮೂಲಭೂತ ಹಕ್ಕಿನ ಉಲ್ಲಂಘನೆ. ಹಿರಿಯ ನಾಗರಿಕರಿಗೆ ಮುಕ್ತ ಸಂಚಾರದ ಸ್ವಾತಂತ್ರ್ಯವಿದೆ. ಇತರೆ ನಾಗರಿಕರಂತೆ ಅವರಿಗೂ ಸಂಚಾರಕ್ಕೆ ನಿರ್ಬಂಧದಿಂದಾಗಿ ಹಿರಿಯ ನಾಗರಿಕರಿಗೆ ತೊಂದರೆಯಾಗಿದೆ. ಹೀಗಾಗಿ, ಸರಕಾರದ ಆದೇಶ ರದ್ದುಗೊಳಿಸಬೇಕು ಎಂದು ಕೋರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News