ಬೇಕಾಬಿಟ್ಟಿ ಹಣ ವಸೂಲಿ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಶ್ರೀರಾಮುಲು ಎಚ್ಚರಿಕೆ

Update: 2020-06-06 17:41 GMT

ಬೆಂಗಳೂರು, ಜೂ. 6: ಖಾಸಗಿ ಆಸ್ಪತ್ರೆಗಳು ಕೊರೋನ ಸೋಂಕಿತರಿಗೆ ಚಿಕಿತ್ಸೆ ಕೊಡುವ ಸಂದರ್ಭದಲ್ಲಿ ಬೇಕಾಬಿಟ್ಟಿ ಹಣ ವಸೂಲಿ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡಲು ಕೆಲ ಖಾಸಗಿ ಆಸ್ಪತ್ರೆಗಳು ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದೆ. ದುಪ್ಪಟ್ಟು ದರ ವಸೂಲಿ ಮಾಡಿದರೆ ಕಠಿಣ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳು ದೊಡ್ಡ ಪ್ರಮಾಣದಲ್ಲಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ನಾಗರಿಕರು ಮಾಹಿತಿ ನೀಡಬೇಕು. ಅಂತಹ ಆಸ್ಪತ್ರೆಗಳ ಮಾಲಕರು ಎಷ್ಟೇ ಪ್ರಬಲರಾಗಿದ್ದರೂ, ಮುಲಾಜಿಲ್ಲದೇ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡಲು ಶುಲ್ಕ ನಿಗದಿ ಮಾಡುವ ಕುರಿತು ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಎಲ್ಲ ಖಾಸಗಿ ಆಸ್ಪತ್ರೆಗಳಿಗೂ ಅನ್ವಯವಾಗುವಂತೆ ಏಕದರವನ್ನು ನಿಗದಿ ಪಡಿಸುವುದಾಗಿ ಅವರು ತಿಳಿಸಿದರು.

ಪ್ರತಿಯೊಂದು ಖಾಸಗಿ ಆಸ್ಪತ್ರೆಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾರಾದರು ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದ ಅವರು, ಕೆಲವು ಸೋಂಕಿತರು ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ಥಿಕವಾಗಿ ಸಬಲರಾಗಿರುವವರು ಎಷ್ಟು ಬೇಕಾದರು ಹಣ ನೀಡಿ ಚಿಕಿತ್ಸೆ ಪಡೆದುಕೊಳ್ಳಬಹುದು. ಆದರೆ, ಬಡವರಿಗೂ ಮತ್ತು ಶ್ರೀಮಂತರಿಗೂ ಒಂದೇ ಮಾದರಿಯ ಶುಲ್ಕ, ವಿಧಿಸಿದರೆ. ಅದನ್ನು ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News