ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೂ ಅವಿರೋಧ ಆಯ್ಕೆ ಸಾಧ್ಯತೆ

Update: 2020-06-08 13:40 GMT
ಮಲ್ಲಿಕಾರ್ಜುನ ಖರ್ಗೆ- ದೇವೇಗೌಡ- ಅಶೋಕ್ ಗಸ್ತಿ -ಈರಣ್ಣ ಕಡಾಡಿ

#ಮಂಗಳವಾರ ನಾಮಪತ್ರ ಸಲ್ಲಿಸಲಿರುವ ದೇವೇಗೌಡ

ಬೆಂಗಳೂರು, ಜೂ.8: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂ.19ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷದ ತಲಾ ಒಬ್ಬ ಅಭ್ಯರ್ಥಿ ಹಾಗೂ ಬಿಜೆಪಿಯ ಎರಡು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಸೋಮವಾರ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿಯಲ್ಲಿ ಅಚ್ಚರಿಯ ಬೆಳವಣಿಗೆಯಲ್ಲಿ ಇಬ್ಬರು ಹೊಸಬರಿಗೆ ಮಣೆ ಹಾಕಲಾಗಿದೆ.

ರಾಯಚೂರು ಜಿಲ್ಲೆಯ ಅಶೋಕ್ ಗಸ್ತಿ ಹಾಗೂ ಬೆಳಗಾವಿ ಜಿಲ್ಲೆಯ ಈರಣ್ಣ ಕಡಾಡಿಯನ್ನು ಬಿಜೆಪಿ ತನ್ನ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ. ಆ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯಸಭಾ ಸ್ಥಾನಕ್ಕಾಗಿ ನಡೆಯುತ್ತಿದ್ದ ‘ಕೋರೆ-ಕತ್ತಿ’ ಕದನಕ್ಕೆ ಬಿಜೆಪಿ ಹೈಕಮಾಂಡ್ ಕಡಿವಾಣ ಹಾಕಿದೆ.

ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿದ್ದ ಪ್ರಭಾಕರ್ ಕೋರೆ ಮತ್ತೊಂದು ಅವಧಿಗೆ ಮುಂದುವರಿಯಲು ಸಾಕಷ್ಟು ಪ್ರಯತ್ನ ನಡೆಸಿದ್ದರು. ಅದೇ ರೀತಿ, ಹಿರಿಯ ಶಾಸಕ ಹಾಗೂ ಸಚಿವ ಸ್ಥಾನ ವಂಚಿತ ಉಮೇಶ್ ಕತ್ತಿ, ತಮ್ಮ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭಾ ಸ್ಥಾನ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದರು. ಆದರೆ, ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಇವರಿಬ್ಬರ ಒತ್ತಡಕ್ಕೆ ಮಣಿಯದೆ, ಹೊಸಬರಿಗೆ ಮಣೆ ಹಾಕಿದೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡು, ಪಕ್ಷದ ಬಿ.ಫಾರಂ ಪಡೆದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ, ಆರ್.ವಿ.ದೇಶಪಾಂಡೆ ಅವರ ಜೊತೆ ವಿಧಾನಸೌಧಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಆನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಗೆ ನಮ್ಮನ್ನು ಆಯ್ಕೆ ಮಾಡಲು ನಿರ್ಧರಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯರಿಗೆ ತುಂಬು ಹೃದಯದ ಧನ್ಯವಾದಗಳು ಹಾಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಚುನಾವಣೆ ನಡೆದರೆ ಕರ್ನಾಟಕ ವಿಧಾನಸಭೆಯ ಎಲ್ಲ ಶಾಸಕರು ನನಗೆ ಮತ ಹಾಕಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ನಮ್ಮ ನಾಯಕರು ನನ್ನ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಅಪೇಕ್ಷೆ ಉಳಿಸಿಕೊಳ್ಳುವಂತೆ ಮುಂದಿನ ದಿನಗಳಲ್ಲಿ ನಡೆದುಕೊಳ್ಳುತ್ತೇನೆ ಎಂದು ಅವರು ಹೇಳಿದರು.

ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್, ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿಯಲ್ಲಿ ರಾಜ್ಯಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಅಶೋಕ್ ಗಸ್ತಿ ಅವರಿಗೆ ಸಿಹಿ ತಿನ್ನಿಸಿ, ಅಭಿನಂದನೆ ಸಲ್ಲಿಸಿದರು. ಅಲ್ಲದೆ, ಮತ್ತೊಬ್ಬ ಅಭ್ಯರ್ಥಿ ಈರಣ್ಣ ಕಡಾಡಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಅಭಿನಂದನೆ ಸಲ್ಲಿಸಿದರು.

ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಾಳೆ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News