ಜೂ.9: ಉಡುಪಿ ಜಿಲ್ಲೆಗೆ ಆರೋಗ್ಯ ಮತ್ತು ಶಿಕ್ಷಣ ಸಚಿವರು ಭೇಟಿ
ಉಡುಪಿ, ಜೂ.8: ರಾಜ್ಯ ಆರೋಗ್ಯ, ಕುಟುಂಬ ಕಲ್ಯಾಣಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಜೂ.9ರ ಬೆಳಗ್ಗೆ ಜಿಲ್ಲೆ ಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸೋಮವಾರ ರಾತ್ರಿ ಕಾರವಾರದಿಂದ ಉಡುಪಿಗೆ ಬಂದು ನಗರದಲ್ಲಿ ವಾಸ್ತವ್ಯವಿರುವರು ಸಚಿವರು ಬೆಳಗ್ಗೆ 10 ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಕುರಿತು ಸಭೆ ನಡೆಸಿದ ನಂತರ 11:30ಕ್ಕೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಡಿಕೇರಿಗೆ ತೆರಳುವರು.
ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ಅವರೂ ನಾಳೆ ಬೆಳಗ್ಗೆ 10:30ಕ್ಕೆ ಉಡುಪಿಗೆ ಆಗಮಿಸಲಿದ್ದು, ಮಣಿಪಾಲದ ಜಿಪಂ ಸಭಾಂಗಣದಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಜಿಲ್ಲೆಗಳ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳು, ಶಿಕ್ಷಣ ಇಲಾಖೆಯ ಡಿಡಿಪಿಐ, ಬಿಇಓಗಳೊಂದಿಗೆ ಎಸೆಸೆಲ್ಸಿ ಪರೀಕ್ಷೆ ಪೂರ್ವಸಿದ್ಧತೆಯ ಕುರಿತಂತೆ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಳ್ಳುವರು.
ಅಪರಾಹ್ನ 2 ಗಂಟೆಗೆ ಅವರು ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.