ಕೊರೋನ ವಿಷಯದಲ್ಲಿ ಬಿಎಸ್‌ವೈಯ ದಿನಕ್ಕೊಂದು ನಿರ್ಧಾರ ಅಪಾಯಕಾರಿ: ಸಿದ್ದರಾಮಯ್ಯ
ಬೆಂಗಳೂರು, ಜೂ. 10: ಕೊರೋನ ಸೋಂಕು ನಿಯಂತ್ರಣ ವಿಷಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೈಗೊಳ್ಳುತ್ತಿರುವ ದಿನಕ್ಕೊಂದು ನಿರ್ಧಾರ ಅಪಾಯಕಾರಿಯಾದುದು. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಾಗ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಬೇಕಾಗಿರುವ ರಾಜ್ಯ ಸರಕಾರ ಪ್ರತಿದಿನ ಸಡಿಲಿಸಿ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿದೆ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, "ಹೊರ ರಾಜ್ಯಗಳಿಂದ ಬಂದವರಿಗೆ 14 ದಿನದ ಸಾಂಸ್ಥಿಕ ಕ್ವಾರಂಟೈನ್ ಬದಲಿಗೆ ಹೋಮ್ ಕ್ವಾರಂಟೈನ್ ಮಾತ್ರ ಕಡ್ಡಾಯಗೊಳಿಸಿರುವುದು ಅತ್ಯಂತ ಬೇಜವಾಬ್ದಾರಿ ಕ್ರಮ. ಹೋಮ್ ಕ್ವಾರಂಟೈನ್ ಅವಧಿಯಲ್ಲಿ ಮೇಲ್ವಿಚಾರಣೆ ಮಾಡುವ ವ್ಯವಸ್ಥೆಯೇ ಇಲ್ಲದಿರುವಾಗ ಸೋಂಕು ತಗಲಿಸಿಕೊಂಡವರು ಇನ್ನಷ್ಟು ಜನರಿಗೆ ಸೋಂಕು ಹರಡುವ ಸಾಧ್ಯತೆ ಇಲ್ಲವೇ?'' ಎಂದು ಪ್ರಶ್ನಿಸಿದ್ದಾರೆ.
'ಸಾಂಸ್ಥಿಕ ಕ್ವಾರಂಟೈನ್ ಪ್ರಾರಂಭದಲ್ಲಿ ಮತ್ತು ಕೊನೆಯಲ್ಲಿ ಎರಡು ಬಾರಿ ಕೋವಿಡ್ ಪರೀಕ್ಷೆಗೊಳಪಡಿಸುತ್ತಿದ್ದ ನಿಯಮವನ್ನು ಬದಲಾಯಿಸಿ ಕ್ವಾರಂಟೈನ್ ಅವಧಿಯಲ್ಲಿ ರೋಗ ಲಕ್ಷಣಗಳು ಕಂಡುಬಂದರೆ ಮಾತ್ರ ಪರೀಕ್ಷೆಗೊಳಪಡಿಸಲು ನಿರ್ಧರಿಸಿರುವುದು ಅತ್ಯಂತ ಅಪಾಯಕಾರಿ ಕ್ರಮ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
'ಕೊರೋನ ಸೋಂಕಿತರಲ್ಲಿ ಶೇ.90ರಷ್ಟು ಮಂದಿಯಲ್ಲಿ ರೋಗ ಲಕ್ಷಣಗಳೇ ಕಂಡುಬಂದಿಲ್ಲ ಎಂದು ಆರೋಗ್ಯ ಇಲಾಖೆಯೇ ಒಪ್ಪಿಕೊಂಡಿರುವಾಗ, ಕ್ವಾರಂಟೈನ್ ಅವಧಿಯಲ್ಲಿ ರೋಗ ಲಕ್ಷಣ ಕಂಡುಬಂದರೆ ಮಾತ್ರ ಪರೀಕ್ಷೆಗೊಳಪಡಿಸುವ ಮುಖ್ಯಮಂತ್ರಿ ಯಡಿಯೂರಪ್ಪನವರ ನಿರ್ಧಾರ ಅಪಾಯಕಾರಿ ಆಗಬಹುದು' ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ಕೋವಿಡ್-19 ನಿಯಂತ್ರಣದ ವಿಷಯದಲ್ಲಿ @CMofKarnataka ಕೈಗೊಳ್ಳುತ್ತಿರುವ ದಿನಕ್ಕೊಂದು ನಿರ್ಧಾರ ಅಪಾಯಕಾರಿಯಾದುದು.
— Siddaramaiah (@siddaramaiah) June 10, 2020
ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಾಗ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಬೇಕಾಗಿರುವ ರಾಜ್ಯ ಸರ್ಕಾರ ಪ್ರತಿದಿನ ಸಡಿಲಿಸಿ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿದೆ.#COVID__19
1/4 pic.twitter.com/4zuuegC6oe