ಸಿಎಂ ಭೇಟಿಯಾಗಿ ಎಂಎಲ್‍ಸಿ ಟಿಕೆಟ್‍ಗೆ ಬೇಡಿಕೆ ಇಟ್ಟ ಎಂಟಿಬಿ ನಾಗರಾಜ್ ?
ಬೆಂಗಳೂರು, ಜೂ.10: ವಿಧಾನ ಪರಿಷತ್ ಚುನಾವಣಾ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ಇಂದು ಮುಖ್ಯಮಂತ್ರಿ ಯಡಿಯೂರಪ್ಪರವರನ್ನು ಭೇಟಿ ಮಾಡಿ ಚುನಾವಣಾ ಟಿಕೆಟ್‍ಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಎಂಟಿಬಿ ಅವರು 'ವಿಧಾನಸಭೆ ಉಪಚುನಾವಣೆಯಲ್ಲಿ ಸೋತ ಬಳಿಕ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಿ ಸಚಿವರನ್ನಾಗಿಸುವ ಮಾತು ನೀಡಿದ್ದೀರಿ. ಅದರಂತೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಿ' ಎಂದು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಎಂಟಿಬಿ ನಾಗರಾಜ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಯಡಿಯೂರಪ್ಪನವರ ಭೇಟಿ ಬಳಿಕ ಕೃಷ್ಣಾದಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ ನಾಗರಾಜ್, ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಾನು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಲ್ಲ. ಪರಿಷತ್ ಸ್ಥಾನ ನೀಡುವಂತೆ ಕೇಳಿಯೂ ಇಲ್ಲ. ಮುಖ್ಯಮಂತ್ರಿ ಮತ್ತು ಪಕ್ಷದ ಮುಖಂಡರು ತೆಗೆದುಕೊಳ್ಳುವ ತೀರ್ಮಾನಗಳಿಗೆ ನನ್ನ ಸಹಮತ ಇದೆ ಎಂದರು.
ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮತ್ತು ಪಕ್ಷದ ವರಿಷ್ಠರಿಗೆ ಎಲ್ಲ ವಿಚಾರಗಳು ಗೊತ್ತಿದೆ. ಹಾಗಾಗಿ ಮುಖ್ಯಮಂತ್ರಿಗಳು ಹಾಗೂ ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ ಎಂದರು. ತಾಲೂಕಿನ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದಾಗಿ ಅವರು ಹೇಳಿ, ರಾಜಕೀಯ ಚರ್ಚೆ ಮಾಡಲಿಲ್ಲ ಎಂದರು.
ಬಿ.ಎಸ್. ಪರಮಶಿವಯ್ಯ ಪರ ಮಠಾಧೀಶರ ಲಾಬಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಮಠಾಧೀಶರ ನಿಯೋಗ ಅಖಿಲ ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಬಿ.ಎಸ್. ಪರಮಶಿವಯ್ಯ ಅವರಿಗೆ ಟಿಕೆಟ್ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ಮನವಿ ಮಾಡಿತು.