×
Ad

ಎಸೆಸೆಲ್ಸಿ ಪರೀಕ್ಷೆಯಲ್ಲಿ ಲೋಪದೋಷಗಳಿಗೆ ಆಸ್ಪದ ಇರಬಾರದು: ಚಿಕ್ಕಮಗಳೂರು ಡಿಸಿ ಡಾ.ಬಗಾದಿ ಗೌತಮ್

Update: 2020-06-10 23:36 IST

ಚಿಕ್ಕಮಗಳೂರು, ಜೂ.10: ಜಿಲ್ಲೆಯಲ್ಲಿ ಈ ಬಾರಿ ನಡೆಯುವ ಎಸೆಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಪರೀಕ್ಷಾರ್ಥಿಯು ಪರೀಕ್ಷೆಯಿಂದ ವಂಚಿತರಾಗದಂತೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಕೋವಿಡ್-19 ಹಿನ್ನೆಲೆಯಲ್ಲಿ ಸರಕಾರ ಎಸೆಸೆಲ್ಸಿ ಪರೀಕ್ಷೆಯನ್ನು ವಿಶೇಷವಾಗಿ ಪರಿಗಣಿಸಿದ್ದು, ಶಿಕ್ಷಣ, ಆರೋಗ್ಯ, ಪೊಲೀಸ್ ಮತ್ತು ಸಾರಿಗೆ ಇಲಾಖೆಗಳ ಸಹಯೋಗದೊಂದಿಗೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಪರೀಕ್ಷೆ ವೇಳೆ ಯಾವುದೇ ಲೋಪ-ದೋಷಗಳಿಲ್ಲದೆ ಯಶಸ್ವಿಯಾಗಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಅಬ್ದುಲ್ ನಝೀರ್ ಸಾಬ್ ಸಭಾಂಗಣದಲ್ಲಿ 2019-20ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂ.25ರಿಂದ ಪರೀಕ್ಷೆಗಳು ಆರಂಭವಾಗಲಿದ್ದು ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳ ಮಾಹಿತಿ ಪಡೆದು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಮಲೆನಾಡು ಭಾಗಗಳಲ್ಲಿ ಅಗತ್ಯವಿದ್ದಲ್ಲಿ ಖಾಸಗಿ ವಾಹನಗಳನ್ನು ಬಳಸಿಕೊಂಡು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಾರಿಗೆ ಅವ್ಯವಸ್ಥೆಯಿಂದಾಗಿ ಪರೀಕ್ಷೆ ಬರೆಯದೇ ಯಾವುದೇ ಮಕ್ಕಳು ವಂಚಿತರಾಗದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದ ಅವರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾರ್ಗದ ನಕ್ಷೆಯನ್ನು ತಯಾರಿಸಿ ಸಾರಿಗೆ ಇಲಾಖಾ ಅಧಿಕಾರಿಗಳಿಗೆ ನೀಡುವಂತೆ ತಿಳಿಸಿದರು.

ಜಿಲ್ಲೆಯ ಪ್ರತೀ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನರ್ ಪರೀಕ್ಷೆ ನಡೆಸಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸುವಂತೆ ತಿಳಿಸಬೇಕು. ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿ ಪರೀಕ್ಷೆ ಬರೆಯುವ ಎಲ್ಲಾ ಪರೀಕ್ಷಾರ್ಥಿಗಳ ಆರೋಗ್ಯ ತಪಾಸಣೆ ನಡೆಸಬೇಕು. ಬೇರೆ ಕಾರಣಗಳಿಂದ ವಿದ್ಯಾರ್ಥಿಗಳಲ್ಲಿ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಮಕ್ಕಳಿಗೆ ಆತ್ಮವಿಶ್ವಾಸ ತುಂಬುವ ಮೂಲಕ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದ ಅವರು, ಪ್ರತಿ ತಾಲೂಕುಗಳಲ್ಲಿ ಎರಡು ಕಾಯ್ದಿರಿಸಿದ (ರಿಸರ್ವ್) ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದ್ದು, ಈ ಕೇಂದ್ರಗಳ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿವಿಧ ಇಲಾಖೆಯ ಸಿಬ್ಬಂದಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಎಸ್.ಪೂವಿತಾ ಮಾತನಾಡಿ ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯನ್ನು ವಿವಿಧ ಮಾರ್ಗಸೂಚಿ ಅನ್ವಯ ನಡೆಸಲು ಸೂಚಿಸಿದೆ. ಅದರಂತೆ ಪರೀಕ್ಷಾ ಕೇಂದ್ರಗಳಿಗೆ ತಲುಪಲು ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ತಲುಪುವುದು ತಡವಾದಲ್ಲಿ ಪಾಲಕರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಸೇರಿದಂತೆ ನೈರ್ಮಲ್ಯ ಕಾಪಾಡಲು ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿನ ಸಿಸಿ ಟಿವಿಗಳನ್ನು ತಪ್ಪದೇ ಪರಿಶೀಲಿಸಬೇಕು ಎಂದರು.

ಆರೋಗ್ಯಾಧಿಕಾರಿ ಡಾ.ಭರತ್ ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದು, ಬೆಳಗ್ಗೆ 8:30ಕ್ಕೆ ವಿದ್ಯಾರ್ಥಿಗಳು ಹಾಜರಿರಬೇಕು. ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯಕ್ಕನುಸಾರವಾಗಿ ಪ್ರತೀ ಪರೀಕ್ಷಾ ಕೇಂದ್ರಕ್ಕೆ 10 ಎನ್-95 ಮಾಸ್ಕ್ ಗಳನ್ನು ನೀಡಲಾಗಿದ್ದು, ಜ್ವರದ ಲಕ್ಷಣಗಳು ಕಂಡು ಬಂದ ವಿದ್ಯಾರ್ಥಿಗಳಿಗೆ ಈ ಮಾಸ್ಕ್ ಗಳನ್ನು ನೀಡುವಂತೆ ತಿಳಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಮಾಸ್ಕ್ ಗಳನ್ನು ಧರಿಸಿಯೇ ಪರೀಕ್ಷಾ ಕೊಠಡಿಗಳಿಗೆ ಹಾಜರಾಗುವಂತೆ ನೋಡಿಕೊಳ್ಳಲಾಗುವುದು ಎಂದು  ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ, ಸರ್ವಶಿಕ್ಷಣ ಅಭಿಯಾನದ ಸಹನಿರ್ದೇಶಕ ಚಂದ್ರಪ್ಪ, ಎಸೆಸೆಲ್ಸಿ ಪರೀಕ್ಷೆಗೆ ಅಂತರ ಜಿಲ್ಲಾ ವೀಕ್ಷಕರಾಗಿ ಆಗಮಿಸುವ ಜಿಲ್ಲಾಮಟ್ಟದ ನೋಡಲ್ ಅಧಿಕಾರಿ ಪುಟ್ಟರಾಜು, ಡಯಟ್ ಪ್ರಾಂಶುಪಾಲೆ ಪುಷ್ಪಲತಾ ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ 13924 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ, ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಪ್ರತೀ ವಿದ್ಯಾರ್ಥಿಗೆ ವಿವಿಧ ಸಂಘ ಸಂಸ್ಥೆಗಳಿಂದ 2 ಮಾಸ್ಕ್ ವಿತರಿಸಲಾಗುತ್ತಿದೆ. ಸುರಕ್ಷಿತ ಅಂತರ ಕಾಯ್ದುಕೊಳ್ಳುವ ಬಗ್ಗೆ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಿಗೆ 2 ಹಂತದಲ್ಲಿ ಮಾರ್ಗದರ್ಶನ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಸಾಗಾಣೆ ಮಾರ್ಗಕ್ಕೆ ಪೊಲೀಸ್ ಭದ್ರತೆ ಕೋರಿ ಪತ್ರ ಬರೆಯಲಾಗಿದೆ. ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮತ್ತು ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಈಗಾಗಲೇ ಆದೇಶ ನೀಡಿದ್ದಾರೆ. ಪ್ರತೀ ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಇಲಾಖೆ ಸಹಕಾರದೊಂದಿಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಸಹಾಯ ಪಡೆಯಲಾಗಿದೆ. ಪ್ರತೀ ತಾಲೂಕಿಗೆ 2ರಂತೆ ಜಿಲ್ಲಾ ಕೇಂದ್ರದಲ್ಲಿ ಹೆಚ್ಚುವರಿಯಾಗಿ 1 ಪರೀಕ್ಷಾ ಕೇಂದ್ರವನ್ನು ಕಾಯ್ದಿರಿಸಲಾಗಿದೆ. ತಾಲೂಕಿಗೆ ಒಬ್ಬರಂತೆ ಎಲ್ಲಾ ತಾಲೂಕಿನಲ್ಲಿಯೂ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.
- ಸಿ.ನಂಜಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News