ಆಶಾ ಕಾರ್ಯಕರ್ತೆಯರಿಗೆ ಸಾಲ ವ್ಯವಸ್ಥೆ ಶೀಘ್ರದಲ್ಲಿ ಜಾರಿ : ಸಚಿವ ಸೋಮಶೇಖರ್

Update: 2020-06-12 08:50 GMT

ದಾವಣಗೆರೆ: ಆಶಾ ಕಾರ್ಯಕರ್ತೆಯರಿಗೂ ಸಹಕಾರ ಇಲಾಖೆ ವತಿಯಿಂದ ಸಾಲ ಕೊಡಿಸುವ ವ್ಯವಸ್ಥೆಯನ್ನು ಶೀಘ್ರದಲ್ಲಿ ಜಾರಿಗೆ ತರಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ರಾಜ್ಯ ಸರ್ಕಾರದ ಸಹಕಾರ ಇಲಾಖೆ ವತಿಯಿಂದ ಕೋವಿಡ್ -19 ವಿರುದ್ಧ ಹೋರಾಡಿದ ಆಶಾ ಕಾರ್ಯಕರ್ತೆಯರಿಗೆ  ಕೊಡಮಾಡುವ ತಲಾ 3 ಸಾವಿರ ರೂ. ಸಹಾಯಧನ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೊರೋನ ಸಂಕಷ್ಟಗಳ ಕಾಲದಲ್ಲಿ ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ಸಹಕಾರ ಇಲಾಖೆಯಿಂದ 53 ಕೋಟಿ ರೂಪಾಯಿ ಯನ್ನು ಸಂಗ್ರಹಿಸಿಕೊಟ್ಟಿದ್ದೇನೆ. ಇನ್ನು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಕೊಡುವ ವಿಚಾರದಲ್ಲೂ ಮುಖ್ಯಮಂತ್ರಿಗಳಿಗೆ ಸಹಕಾರ ಕೊಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿರುವ 42 ಸಾವಿರ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿಯಂತೆ ಕೊಡಲು ಬೇಕಾಗುವ 12.7 ಕೋಟಿ ರೂಪಾಯಿಯನ್ನು ಸಹಕಾರ ಇಲಾಖೆಯಿಂದಲೇ ಭರಿಸಲಾಗುತ್ತಿದೆ. ಯಾರಿಗಾದರೂ ಹಣ ಬಂದಿಲ್ಲವಾದರೆ ಸಹಕಾರ ಇಲಾಖೆಯ ಡೆಪ್ಯುಟಿ ರಿಜಿಸ್ಟರ್ ಗಮನಕ್ಕೆ ತನ್ನಿ ಎಂದು ಸಚಿವರು ತಿಳಿಸಿದರು.

ಬಡ ವರ್ಗದವರಿಗೆ ಬಡವರ ಬಂಧು ಇಲ್ಲವೇ ಸ್ತ್ರೀ ಶಕ್ತಿ ಸಂಘಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಇದರಿಂದ ಅವರ ಆರ್ಥಿಕ ಸಬಲೀಕರಣ ಆಗುವುದಲ್ಲದೆ, ಸಾಲ ಮರುಪಾವತಿಯೂ ನೂರಕ್ಕೆ ನೂರು ಆಗಲಿದೆ. ಅದೇ ರೀತಿ ಆಶಾ ಕಾರ್ಯಕರ್ತೆಯರಿಗೂ ಸಾಲ ಕೊಡಿಸುವ ವ್ಯವಸ್ಥೆಯನ್ನು ಶೀಘ್ರದಲ್ಲಿ ಜಾರಿಗೆ ತರಲಾಗುವುದು ಎಂದು ಸಚಿವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News