ಮಲ್ಲಿಕಾರ್ಜುನ ಖರ್ಗೆ, ದೇವೇಗೌಡ, ಈರಣ್ಣ ಕಡಾಡಿ, ಅಶೋಕ್ ಗಸ್ತಿ ರಾಜ್ಯಸಭೆಗೆ ಅವಿರೋಧ ಆಯ್ಕೆ

Update: 2020-06-12 14:31 GMT

ಬೆಂಗಳೂರು, ಜೂ. 12: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳ ದ್ವೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‍ನ ಎಚ್.ಡಿ.ದೇವೇಗೌಡ ಹಾಗೂ ಬಿಜೆಪಿಯ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದ ಮೊದಲ ಮಹಡಿಯಲ್ಲಿನ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಉಮೇದುವಾರಿಕೆ ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಚುನಾವಣಾ ಕಣದಲ್ಲಿ ಬೇರೆ ಯಾರೂ ಅಭ್ಯರ್ಥಿಗಳಿಲ್ಲದ ಕಾರಣ ನಾಲ್ವರೂ ಅವಿರೋಧವಾಗಿ ಆಯ್ಕೆಗೊಂಡಿದಾರೆ ಎಂದು ಪ್ರಕಟಿಸಿದರು.

ಪಕ್ಷೇತರ ಅಭ್ಯಥಿಯಾಗಿ ಸಂಗಮೇಶ್ ಚಿಕ್ಕ ನರಗುಂದ ಎಂಬವರು ನಾಮಪತ್ರ ಸಲ್ಲಿಸಿದ್ದರು. ಆದರೆ, ಅದಕ್ಕೆ ಯಾವುದೇ ಶಾಸಕರು ಸೂಚಕರಾಗಿ ಸಹಿ ಹಾಕದ ಕಾರಣಕ್ಕೆ ಅವರ ಉಮೇದುವಾರಿಕೆ ತಿರಸ್ಕೃತವಾಗಿತ್ತು. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ, ದೇವೇಗೌಡ, ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆಂದು ಅವರು ತಿಳಿಸಿದರು.

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‍ನ ದೇವೇಗೌಡ, ಬಿಜೆಪಿಯ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ಅವರು ಅಧಿಕೃತ ಘೋಷಣಾ ಪತ್ರವನ್ನು ಪಡೆದುಕೊಂಡಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಮಾಹಿತಿ ನೀಡಿದರು.

2019ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ದೇವೇಗೌಡ ಅವರು, ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ವಿರುದ್ಧ ಸೋಲು ಕಂಡಿದ್ದರು. ಅತ್ತ ಸೋಲಿಲ್ಲದ ಸರದಾರನೆಂಬ ಖ್ಯಾತಿಗೆ ಪಾತ್ರರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿಯ ಉಮೇಶ್ ಜಾಧವ್ ವಿರುದ್ಧ ಪರಾಭವಗೊಂಡಿದ್ದರು.

ಹಿರಿಯರ ಮನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ರಾಜ್ಯಸಭೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ ಅವರು ಈ ಹಿಂದೆ 1996ರಲ್ಲಿ ರಾಜ್ಯಸಭಾ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದು, ಇದೀಗ ಎರಡನೆ ಬಾರಿಗೆ ರಾಜ್ಯಸಭೆ ಪ್ರವೇಶಿಸುತ್ತಿದ್ದಾರೆ.

ಮೊದಲ ಬಾರಿಗೆ ಪ್ರವೇಶ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ 'ಸಾಮಾನ್ಯ ಕಾರ್ಯಕರ್ತ'ರಾಗಿರುವ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ಅವರು ಇದೇ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ.

ರಾಜ್ಯದ ಸಮಸ್ಯೆಗಳನ್ನು ಸಂಸತ್‍ನಲ್ಲಿ ಪ್ರಸ್ತಾಪಿಸುವೆ: ಖರ್ಗೆ

ನನ್ನ ಮೇಲೆ ನಂಬಿಕೆಯನ್ನಿಟ್ಟು ವಿಧಾನಸಭೆಯಿಂದ ರಾಜ್ಯಸಭೆಗೆ ಕಳುಹಿಸಿದ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಮತ್ತು ಇನ್ನಿತರ ಮುಖಂಡರಿಗೆ ಅಭಿನಂದನೆ ಸಲ್ಲಿಸುವೆ. ಜೊತೆಗೆ ಅವರು ನನ್ನ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ರಾಜ್ಯ ಮತ್ತು ದೇಶದ ಸಮಸ್ಯೆಗಳನ್ನು ಸಂಸತ್‍ನಲ್ಲಿ ಪ್ರಸ್ತಾಪಿಸುವ ಮೂಲಕ ಅತ್ಯಂತ ಸಮರ್ಥವಾಗಿ ಕೆಲಸ ನಿರ್ವಹಿಸುತ್ತೇನೆ ಎಂದ ಅವರು, ನನ್ನಷ್ಟು ವರ್ಷ ವಿಧಾನಸಭೆಗೆ ಆಯ್ಕೆಯಾದವರು ಬಿಜೆಪಿಯಲ್ಲಿ ಯಾರೂ ಇಲ್ಲ. ನನ್ನಂತೆ ಸುದೀರ್ಘ ಅವಧಿ ರಾಜಕಾರಣವನ್ನು ಬಿಜೆಪಿಯವರು ಮಾಡಲಿ ಎಂದು ಬಿಜೆಪಿ ಮುಖಂಡರ ಆರೋಪಕ್ಕೆ ಇದೇ ವೇಳೆ ತಿರುಗೇಟು ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News