ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಪಾಳಯದಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಲಾಬಿ
ಬೆಂಗಳೂರು, ಜೂ.13: ವಿಧಾನಸಭೆಯಿಂದ ವಿಧಾನಪರಿಷತ್ತಿನ 7 ಸ್ಥಾನಗಳಿಗೆ ಜೂ.29ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸಂಖ್ಯಾಬಲದ ಆಧಾರದಲ್ಲಿ ಎರಡು ಸ್ಥಾನಗಳನ್ನು ಗೆಲ್ಲಬಹುದಾಗಿದ್ದು, ಇದಕ್ಕಾಗಿ ಟಿಕೆಟ್ ಆಕಾಂಕ್ಷಿಗಳಿಂದ ದೊಡ್ಡಮಟ್ಟದಲ್ಲಿ ಲಾಬಿ ನಡೆಯುತ್ತಿದೆ.
ಕಾಂಗ್ರೆಸ್ ಪಕ್ಷದಿಂದ ಅಲ್ಪಸಂಖ್ಯಾತ ಸಮುದಾಯದ ನಸೀರ್ ಅಹ್ಮದ್, ಹಿಂದುಳಿದ ವರ್ಗಗಳ ಸಮುದಾಯದ ಎಚ್.ಎಂ.ರೇವಣ್ಣ, ಜಯಮ್ಮ, ಎಂ.ಸಿ.ವೇಣುಗೋಪಾಲ್, ಎನ್.ಎಸ್.ಬೋಸ್‍ರಾಜು ಜೂ.30ರಂದು ವಿಧಾನಪರಿಷತ್ ಸದಸ್ಯತ್ವವನ್ನು ಪೂರ್ಣಗೊಳಿಸಲಿದ್ದಾರೆ. ಈ ಪೈಕಿ ನಸೀರ್ ಅಹ್ಮದ್ ಹಾಗೂ ಎಚ್.ಎಂ.ರೇವಣ್ಣ ತಮ್ಮ ಸದಸ್ಯತ್ವವನ್ನು ಮುಂದುವರಿಸುವ ಸಂಬಂಧ ಪ್ರಭಾವ ಬೀರುತ್ತಿದ್ದಾರೆ ಎನ್ನಲಾಗಿದೆ.
ತಮಗಾಗಿ ಬಾದಾಮಿಯಲ್ಲಿ ಕ್ಷೇತ್ರ ತ್ಯಾಗ ಮಾಡಿದ್ದ ಬಿ.ಬಿ.ಚಿಮ್ಮನಕಟ್ಟಿಗೆ ವಿಧಾನಪರಿಷತ್ ಸ್ಥಾನ ದೊರಕಿಸಿ ಕೊಡಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಂದಾಗಿದ್ದಾರೆ ಎನ್ನಲಾಗಿದೆ. ಇದರ ನಡುವೆ ಎಂ.ಸಿ.ವೇಣುಗೋಪಾಲ್, ವಿ.ಎಸ್.ಉಗ್ರಪ್ಪ ಮೇಲ್ಮನೆ ಪ್ರವೇಶಿಸುವ ಕನಸು ಕಾಣುತ್ತಿದ್ದಾರೆ.
ಈಗಾಗಲೇ ಕೇಂದ್ರದ ಮಾಜಿ ಸಚಿವ ಡಾ.ಕೆ.ರಹ್ಮಾನ್ ಖಾನ್ ನೇತೃತ್ವದಲ್ಲಿ ಮುಸ್ಲಿಮ್ ಶಾಸಕರು, ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಗೆಲ್ಲಬಹುದಾದ ಎರಡು ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಮುಸ್ಲಿಮರಿಗೆ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಹಿಂದುಳಿದ ವರ್ಗಗಳ ಮುಖಂಡರ ನಿಯೋಗವು ಎಚ್.ಎಂ.ರೇವಣ್ಣ ಪರ ಲಾಬಿ ನಡೆಸಿದೆ.
ಎನ್‍ಆರ್‍ಐ ಫೋರಂ-ಕರ್ನಾಟಕದ ಮಾಜಿ ಅಧ್ಯಕ್ಷೆ ಡಾ.ಆರತಿ ಕೃಷ್ಣ, ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು, ಮಹಿಳಾ ಕೋಟಾದಡಿಯಲ್ಲಿ ಅವಕಾಶ ಕಲ್ಪಿಸುವಂತೆ ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ವಿದೇಶದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಸ್ವದೇಶಕ್ಕೆ ವಾಪಸ್ ಕರೆತರುವ ಸಂಬಂಧ ಪ್ರಯತ್ನಗಳಲ್ಲಿ ಅತ್ಯಂತ ಸಕ್ರಿಯವಾಗಿ ಆರತಿ ಕೃಷ್ಣ ತೊಡಗಿಕೊಂಡಿದ್ದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸವು ರಾಜಕೀಯ ಚಟುವಟಿಕೆಗಳ ತಾಣವಾಗಿ ಪರಿವರ್ತನೆಗೊಂಡಿದ್ದು, ಮಾಜಿ ಸಚಿವ ಎಂ.ಆರ್.ಸೀತಾರಾಂ, ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ಇನ್ನಿತರರು ಮೇಲ್ಮನೆ ಪ್ರವೇಶಿಸುವ ಕುರಿತು ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದಾರೆ.