ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರದ್ದತಿಗೆ ವೆಲ್ಫೇರ್ ಪಾರ್ಟಿ ಆಗ್ರಹ

Update: 2020-06-13 12:41 GMT

ಬೆಂಗಳೂರು, ಜೂ.13: ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರದಿಂದ ಸರಕಾರ ಹಿಂದೆ ಸರಿಯಬೇಕೆಂದು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಆದಿಲ್ ಪಟೇಲ್ ಒತ್ತಾಯಿಸಿದ್ದಾರೆ.

ಸರಕಾರ ರಿಯಲ್ ಎಸ್ಟೇಟ್ ದಂಧೆಕೋರರು, ಬಂಡವಾಳಶಾಹಿಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಒತ್ತಡಕ್ಕೆ ಮಣಿದು 1961ರ ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಸರಕಾರದ ಈ ನಡೆ ಖಂಡನೀಯ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ಸದ್ಯ ಕೃಷಿಕರಿಗೆ ಮಾತ್ರ ಕೃಷಿ ಭೂಮಿ ಖರೀದಿಗೆ ಅವಕಾಶವಿದೆ. ಕಾಯ್ದೆ ತಿದ್ದುಪಡಿಯಾದರೆ ಕೃಷಿಕರಲ್ಲದವರಿಗೂ ಕೃಷಿ ಭೂಮಿ ಖರೀದಿಸಲು ಅವಕಾಶ ಸಿಗುತ್ತದೆ. ಇದು ಕೃಷಿ ಕ್ಷೇತ್ರದ ಮೇಲೆ ಪ್ರತಿಗಾಮಿ ಪರಿಣಾಮ ಬೀರುತ್ತದೆ' ಎಂದು ಆದಿಲ್ ಪಟೇಲ್ ಆತಂಕ ವ್ಯಕ್ತಪಡಿಸಿದ್ದಾರೆ.

ಸರಕಾರ ರೈತರನ್ನು ಬೀದಿಗೆ ತಳ್ಳಿ, ರಿಯಲ್ ಎಸ್ಟೇಟ್ ಉದ್ಯಮಿಗಳ ಹಿತ ಕಾಯಲು ಹೊರಟಿದೆ. ರಿಯಲ್ ಎಸ್ಟೇಟ್ ಉದ್ಯಮಿಗಳ ಕೈಗೊಂಬೆಯಾಗಿರುವ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತಂದಿದ್ದ ಸರಕಾರ ಇದೀಗ ರೈತರಿಗೆ ಮತ್ತೊಂದು ಆಘಾತ ನೀಡಿದೆ ಎಂದು ಅವರು ಕಿಡಿಕಾರಿದ್ದಾರೆ.

ಹೋರಾಟದ ಎಚ್ಚರಿಕೆ: ದೇಶದಲ್ಲಿ ಶೇ.80ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾರೆ. ಇವರು ಹಣದಾಸೆಗೆ ಭೂಮಿ ಮಾರಾಟ ಮಾಡಿದರೆ ಭವಿಷ್ಯದಲ್ಲಿ ಎಂದಿಗೂ ಜಮೀನು ಖರೀದಿಸಲು ಸಾಧ್ಯವಾಗುವುದಿಲ್ಲ. ರೈತ ಕುಲಕ್ಕೆ ಮಾರಕವಾಗಿರುವ ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರವನ್ನುಸರಕಾರ ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯದೆಲ್ಲೆಡೆ ಹೋರಾಟ ನಡೆಸುತ್ತೇವೆ ಎಂದು ಆದಿಲ್ ಪಟೇಲ್ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News