ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ಸಿಎಂಗೆ ಸಲೀಮ್ ಅಹ್ಮದ್ ಪತ್ರ

Update: 2020-06-20 14:59 GMT

ಬೆಂಗಳೂರು, ಜೂ.20: ಉಡುಪಿ ಜಿಲ್ಲೆಯ ಹಿರಿಯಡ್ಕದ ಸ್ವರ್ಣ ನದಿಯಲ್ಲಿ ಹೂಳೆತ್ತುವ ನೆಪದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಕಾಂಗ್ರೆಸ್ ಮುಖಂಡರು, ಸಾರ್ವಜನಿಕರು ಹಾಗೂ ಪತ್ರಕರ್ತರು ನನ್ನ ಗಮನಕ್ಕೆ ತಂದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ತಿಳಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಪತ್ರ ಬರೆದಿರುವ ಅವರು, ಜಿಲ್ಲಾಧಿಕಾರಿ ಸೂಚಿಸಿದ ಷರತ್ತುಗಳನ್ನು ಉಲ್ಲಂಘಿಸಿ ಬಜೆ ಅಣೆಕಟ್ಟಿನಿಂದ ಮಾಣೈ ಹಾಗೂ ಮಾಣೈಯಿಂದ ಶೀರೂರಿನವರೆಗೆ ಹೂಳೆತ್ತುವ ನೆಪದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು, ಇದರಿಂದಾಗಿ ನೂರಾರು ಕೋಟಿ ರೂ.ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿದೆ ಎಂದು ತಿಳಿಸಿದ್ದಾರೆ.

ಈ ಮೂಲಕ ಲಾಕ್‍ಡೌನ್ ದುರ್ಲಾಭವನ್ನು ಪಡೆದು ಸಮಿತಿಯ ಸದಸ್ಯರು ಪ್ರಭಾವಿಗಳೊಂದಿಗೆ ಕೈ ಜೋಡಿಸಿ ಅಕ್ರಮ ಮರಳುಗಾರಿಕೆಯನ್ನು ರಾಜಾರೋಷವಾಗಿ ನಡೆಸಿಕೊಳ್ಳುತ್ತಾ ಬಂದಿದ್ದು, ಈ ಬಗ್ಗೆ ರಮೇಶ್ ಕಾಂಚನ್ ಎಂಬವರು ಎಸಿಬಿ ಹಾಗೂ ಲೋಕಾಯುಕ್ತ ಸಂಸ್ಥೆಗಳಿಗೆ ದೂರನ್ನು ಸಲ್ಲಿಸಿದ್ದು, ಇದುವರೆಗೂ ಯಾವುದೆ ಕ್ರಮ ಕೈಗೊಂಡಿಲ್ಲವೆಂದು ಹೇಳಿದ್ದಾರೆ. ಆದುದರಿಂದ, ತಾವು ದಯವಿಟ್ಟು ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ಅಕ್ರಮ ಮರಳುಗಾರಿಕೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕೆಂದು ಸಲೀಮ್ ಅಹ್ಮದ್ ಪತ್ರದಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News