ಮಂಡ್ಯ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ; ರಸ್ತೆ ತಡೆಗೆ ಮುಂದಾದ ರೈತರು ಪೊಲೀಸ್ ವಶಕ್ಕೆ

Update: 2020-06-20 17:26 GMT

ಮಂಡ್ಯ, ಜೂ.20: ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ(ಮೂಲ ಸಂಘಟನೆ) ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಬೆಂಗಳೂರು ಮೈಸೂರು ಹೆದ್ದಾರಿ ತಡೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ ಪಡೆದರು.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಆಹಾರ ಭದ್ರತೆ, ಆಹಾರ ಸಾರ್ವಭೌಮತೆ ಧಕ್ಕೆ ತರುವ, ಉದ್ಯಮಿಗಳು, ಕಾರ್ಪೋರೇಟ್ ಕಂಪನಿಗಳು ಭೂ ಕಬಳಿಕೆಗೆ ಅನುಕೂಲ ಕಲ್ಪಿಸುವ ಭೂ ಸುಧಾರಣಾ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಪಡಿಸಬೇಕು. ಕೇಂದ್ರ ಸರಕಾರವು ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸಲು ವಿದ್ಯುತ್ ಕಾಯ್ದೆಗೆ ತಿದ್ದುಪಡಿಗೆ ಮುಂದಾಗಿದ್ದು, ರಾಜ್ಯ ಸರಕಾರ ಖಾಸಗೀಕರಣ ಆಗದಂತೆ ಒತ್ತಡ ತರಬೇಕು ಎಂದು ಅವರು ಆಗ್ರಹಿಸಿದರು.

ಮೈಶುಗರ್ ಕಾರ್ಖಾನೆಯನ್ನು ಸರಕಾರಿ ಸ್ವಾಮ್ಯದಲ್ಲಿ ಉಳಿಸಬೇಕು. ಅಲ್ಲಿವರೆಗೆ ಬೇರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಬೇಕು. ಭತ್ತ ಖರೀದಿ ಕೇಂದ್ರ ತೆರೆಯಬೇಕು. ನೀರಿಲ್ಲದೆ ಒಣಗುತ್ತಿರುವ ಬೆಳೆಗಳಿಗೆ ಕೂಡಲೇ ನಾಲೆಯಲ್ಲಿ ಹರಿಸಬೇಕು ಎಂದು ಅವರು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ, ಕಾರ್ಯಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಎಸ್.ಮಂಜೇಗೌಡ, ನಾಗೇಂದ್ರಸ್ವಾಮಿ, ರಾಮಲಿಂಗೇಗೌಡ, ಸೊ.ಸಿ.ಪ್ರಕಾಶ್, ಕೆ.ಜಿ.ಉಮೇಶ್, ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News