ಬಳ್ಳಾರಿ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮೂರನೇ ಬಲಿ

Update: 2020-06-22 15:05 GMT
ಸಾಂದರ್ಭಿಕ ಚಿತ್ರ

ಬಳ್ಳಾರಿ, ಜೂ.21: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದು, ಇದರಿಂದ, ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೋನ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಸೋಮವಾರ ಬಳ್ಳಾರಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ವಿಮ್ಸ್ ಗೆ ದಾಖಲಾಗಿದ್ದರು. ಆದರೆ, ಕೊರೋನ ಸೋಂಕು ತಗುಲಿದೆ ಎಂಬ ಮಾಹಿತಿ ಬರುತ್ತಿದ್ದಂತೆಯೇ ಅವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಅನಿಯಂತ್ರಿತ ಮಧುಮೇಹ, ಸೋಂಕು ತಗುಲಿದೆ ಎಂಬ ಆಘಾತ ಹಾಗೂ ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದ ಅವರಿಗೆ ವೆಂಟಿಲೇಟರ್ ಸೌಕರ್ಯದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೂ ಚಿಕಿತ್ಸೆ ಫಲಿಸಲಿಲ್ಲ ಎಂದು ತಿಳಿಸಿದರು.

ಜಿಂದಾಲ್ ಸಂಸ್ಥೆಯ 36 ಸೋಂಕಿತರು ಸೇರಿ ಜಿಲ್ಲೆಯಲ್ಲಿ ಈವರೆಗೆ 94ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, 50ಕ್ಕೂ ಹೆಚ್ಚು ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಮೂವರು ಮೃತಪಟ್ಟಿದ್ದು, 44ಕ್ಕೂ ಹೆಚ್ಚು ಪ್ರಕರಣಗಳು ಸಕ್ರಿಯವಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News