ಎಸೆಸೆಲ್ಸಿ ಪರೀಕ್ಷೆ: ವೈರಲ್ ಪ್ರಶ್ನೆ ಪತ್ರಿಕೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್
Update: 2020-06-24 18:00 IST
ಬೆಂಗಳೂರು, ಜೂ.24: ಕೋವಿಡ್-19 ಮುಂಜಾಗ್ರತಾ ಕ್ರಮಗಳ ನಡುವೆ ರಾಜ್ಯಾದ್ಯಂತ ಜೂ.25ರಿಂದ ಎಸೆಸೆಲ್ಸಿ ಪರೀಕ್ಷೆ ಪ್ರಾರಂಭಗೊಳ್ಳಲಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆಗಳನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದು, ಇದು ನಕಲಿ ಪ್ರಶ್ನೆ ಪತ್ರಿಕೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನಕಲಿ ಪ್ರಶ್ನೆ ಪತ್ರಿಕೆಯನ್ನು ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ಇಂತಹ ಸುದ್ದಿಗಳಿಗೆ ಕಿವಿ ಕೊಡಬೇಡಬಾರದೆಂದು ಮನವಿ ಮಾಡಿರುವ ಸಚಿವ ಸುರೇಶ್ ಕುಮಾರ್, ವಿದ್ಯಾರ್ಥಿಗಳು ಸ್ಥೈರ್ಯದಿಂದ ಪರೀಕ್ಷೆ ಬರೆಯಬೇಕೆಂದು ಹೇಳಿದ್ದಾರೆ. ಮಾಧ್ಯಮಗಳು ಇಂತಹ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಹರಡದಿರಲು ಮನವಿ ಮಾಡಿದ್ದಾರೆ.