ಮನೆಯಲ್ಲೇ ಉಳಿಯಿರಿ, ಪ್ರಾಣಕ್ಕಿಂತಲೂ ಹಣ ಮುಖ್ಯವಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

Update: 2020-06-24 17:32 GMT

ಬೆಂಗಳೂರು, ಜೂ.24: ಕೊರೋನ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಈಗಿರುವ ಮೂರ್ನಾಲ್ಕು ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್‍ಗಳಿಲ್ಲ, ವೆಂಟಿಲೇಟರ್ ಗಳ ಕೊರತೆ ಇದೆ. ಇದಕ್ಕೆ ಸ್ವಯಂಪ್ರೇರಿತ ಲಾಕ್‍ಡೌನ್ ಒಂದೇ ಪರಿಹಾರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ನಿವಾಸಿಗಳೇ, ನೀವು ಕೋವಿಡ್-19ನಿಂದ ಪಾರಾಗಲು ಈಗ ಉಳಿದಿರುವುದು ಒಂದೇ ದಾರಿ. ಮನೆಯಲ್ಲೇ ಉಳಿದು ನೀವೇ ಸ್ವಯಂಘೋಷಿತ ಬಂದ್ ಆಚರಿಸಿ. ಪ್ರಾಣಕ್ಕಿಂತಲೂ ಹಣ ಮುಖ್ಯವಲ್ಲ. ಜೀವ ಇದ್ದರೆ ಹೇಗಾದರೂ ಬದುಕಬಹುದು. ನಿಮ್ಮ ಜೀವ ಜೀವನ ಈಗ ನಿಮ್ಮ ಕೈಯಲ್ಲಿದೆ ಎಂದು ಅವರು ಮನವಿ ಮಾಡಿದ್ದಾರೆ.

ರಾಜ್ಯ ಸರಕಾರ ಕೂಡ ಇದನ್ನೇ ಪರೋಕ್ಷವಾಗಿ ಹೇಳುತ್ತಿದೆ. ಕೊರೋನ ವೈರಸ್ ಸಮೂಹ ಪ್ರಸರಣದ ಈಗಿನ ಸ್ಥಿತಿಯಲ್ಲಿ ಮನೆಯಲ್ಲಿರುವುದೇ 'ಮನೆ ಮದ್ದು'. ಈ ಸೋಂಕಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸರಕಾರ ನಿಗದಿಪಡಿಸಿರುವುದು ದಿನಕ್ಕೆ 10-15 ಸಾವಿರ ರೂ. ಈ ದರ ಬಡವರಿಗಿರಲಿ, ಮೇಲ್ಮಧ್ಯಮ ವರ್ಗದವರಿಗೂ ಭರಿಸಲು ಸಾಧ್ಯವಾಗದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಒಂದು ಕುಟುಂಬದ ನಾಲ್ಕು ಜನರಿಗೆ ಕೊರೋನ ಬಂದರೆ ಖಾಸಗಿ ಆಸ್ಪತ್ರೆಯಲ್ಲಿ 15 ದಿನಗಳ ಚಿಕಿತ್ಸೆಗೆ ಸರಕಾರ ನಿಗದಿಪಡಿಸಿರುವ ದರದ ಪ್ರಕಾರ 5-6 ಲಕ್ಷ ರೂ.ಬೇಕು. ಬಡವರು ಮಧ್ಯಮ ವರ್ಗದವರು ಎಲ್ಲಿಂದ ತರುತ್ತಾರೆ? ಸರಕಾರ ಕೈಚೆಲ್ಲಿ ಕುಳಿತಿರುವಾಗ ನಮ್ಮ ಜೀವ ನಾವೇ ಉಳಿಸಿಕೊಳ್ಳಬೇಕು. ದಯಮಾಡಿ ಎಚ್ಚರದಿಂದಿರಿ ಇದು ರಾಜ್ಯದ ಜನತೆಗೆ ನನ್ನ ಕಳಕಳಿಯ ಮನವಿ ಎಂದು ಅವರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News